ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಕಟ್ಟಿದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ಮೂಲಕ ಕಾರ್ಮಿಕರಿಗೆ ಕೇಂದ್ರ ಬಿಜೆಪಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ರೇಸ್ ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ರಾಜ್ಯ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಇಂಟಕ್)ನ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಜನ ಸಾಮಾನ್ಯರ ಖಾತೆಗಳಿಗೆ 15 ಲಕ್ಷ ರೂಪಾಯಿ ಜಮೆ, ವಾರ್ಷಿಕ ಎರಡು ಕೋಟಿ ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲಾಗುವುದು ಎಂದು ಸುಳ್ಳು ಹೇಳಿ ಮೋಸ ಮಾಡಿದೆ. ಈ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಸರ್ಕಾರ, ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿ, ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಕಿಡಿಕಾರಿದರು.
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪಾರ. ಆದರೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಕೇಂದ್ರ ಸರ್ಕಾರ ಮಾಲೀಕರ ಪರವಾಗಿದೆ. ಜನವಿರೋಧಿ, ರೈತ ವಿರೋಧಿ ಹಾಗೂ ಕಾರ್ಮಿಕ ವಿರೋಧಿಯಾಗಿರುವ ಬಿಜೆಪಿ ಸರ್ಕಾರದ ಧೋರಣೆಯ ಬಗ್ಗೆ ಮನೆ ಮನೆಗೆ ಮುಟ್ಟಿಸಬೇಕು ಹಾಗೂ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಜನರಿಗೆ ತಿಳಿಯಪಡಿಸಬೇಕು. ಇಂಟಕ್ ಸಂಘಟಿತವಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ | Upper Krishna Project: ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿಯ ಮೆಣಸಿನಕಾಯಿ ಬೆಳೆಗಳಿಗೆ 2.75 ಟಿಎಂಸಿ ನೀರು: ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಸರ್ಕಾರ ಜನರ ಬದುಕಿಗಾಗಿ ಹೋರಾಟ ನಡೆಸುತ್ತಿದೆ. ಆದರೆ, ಬಿಜೆಪಿ ಸರ್ಕಾರ ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಕಾರ್ಮಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. 5 ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ ಎಂದು ಹೇಳಿದರು.
ದೇಶದಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ, ವಿಚಾರಧಾರೆಗಳನ್ನು ಜನರಿಗೆ ತಿಳಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶ್ರಮಿಸಬೇಕು. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದರೆ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಇದನ್ನೂ ಓದಿ | CM Siddaramaiah: ಕೇಂದ್ರ ಸರ್ಕಾರದಿಂದ ಸಂವಿಧಾನ ವಿರೋಧಿ ನಡೆ: ಸಿದ್ದರಾಮಯ್ಯ ಕಿಡಿ
ಇಂಟಕ್ ರಾಜ್ಯ ಅಧ್ಯಕ್ಷ ಲಕ್ಷ್ಮೀ ವೆಂಕಟೇಶ್, ಕಾರ್ಯಾಧ್ಯಕ್ಷರಾದ ಶಾಮನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ, ಶೌಕತ್ ಅಲಿ, ವಿನಯ್ ಬಾಬು, ಬಿಲ್ಡಿಂಗ್ ಕನ್‌ಸ್ಟ್ರಕ್ಷನ್ ಫೆಡರೇಷನ್‌ನ ಅಧ್ಯಕ್ಷ ಜಿ. ಆರ್.ದಿನೇಶ್ ಸೇರಿದಂತೆ ರಾಜ್ಯ ಇಂಟಕ್ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.