Site icon Vistara News

Republic Day 2024: ರಾಜ್ಯದ ಸ್ತಬ್ಧಚಿತ್ರ ನಿರಾಕರಿಸಿ ಕನ್ನಡಿಗರಿಗೆ ಅಪಮಾನ; ಕೇಂದ್ರದ ವಿರುದ್ಧ ಸಿಎಂ ಟೀಕೆ

Siddaramaiah

ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ (Republic Day 2024) ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ (Tableau) ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು. ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರಿಸಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕಿತ್ತೂರು ಚೆನ್ನಮ್ಮ, ಬ್ರಾಂಡ್ ಬೆಂಗಳೂರು ಹಾಗೂ ಕರ್ನಾಟಕದ ನೈಸರ್ಗಿಕ ವ್ಯವಸ್ಥೆ ಸೇರಿ 4 ಸ್ತಬ್ಧಚಿತ್ರಕ್ಕೆ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ… ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ | ವಿಧಾನಸೌಧ ರೌಂಡ್ಸ್: ಡಿಕೆಶಿಗೆ ಡಿಸಿಎಂ ಹುದ್ದೆ ಟೆನ್ಶನ್‌; ಸಚಿವರಿಗೆ ಲೋಕಸಭೆ ಟಿಕೆಟ್‌ ಟೆನ್ಷನ್‌!

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದರು.

Exit mobile version