Site icon Vistara News

Mysore News: ಯಂತ್ರ ಸ್ಟಾರ್ಟ್‌ ಆಗದೆ ಸಿಎಂಗೆ ಮುಜುಗರ; ಸೆಸ್ಕ್ ಎಂಡಿ ಅಮಾನತು

CM Siddaramaiah

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಹಾಗೂ ಮುಜುಗರಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಮೈಸೂರಿನ (Mysore News) ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶ್ರೀಧರ್ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿ, ಉದ್ಘಾಟನೆ ಕಾರ್ಯ ನೆರವೇರಿಸಿದ್ದರು. ಕಾರ್ಯಕ್ರಮಕ್ಕೆ ‘ಬಟನ್’ ಒತ್ತುವ ಮೂಲಕ ಸಿಎಂ ಚಾಲನೆ ನೀಡಿಲು ಮುಂದಾದರು. ಆದರೆ ಯಂತ್ರ ಚಾಲನೆಯಾಗಲಿಲ್ಲ. ಇದರಿಂದ ಸಿಎಂ ತೀವ್ರ ಮುಜುಗರಕ್ಕೆ ಒಳಪಟ್ಟರು. ಹೀಗಾಗಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಸಿಎಂ ಭಾಗವಹಿಸುವ ಕಾರ್ಯಕ್ರಮದ ಸ್ಥಳಗಳಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆಯ ಮುನ್ನೆಚ್ಚರಿಕಾ ಕ್ರಮಗಳನ್ನು ನಿರ್ವಹಿಸಲು ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್ ಶ್ರೀಧ‌ರ್ (ಕೆ.ಎ.ಎಸ್ (ಸೂಪರ್ ಟೈಂ ಸ್ಕೆಲ್) ಅಧಿಕಾರಿ) ಅವರಿಗೆ ಸೂಚನೆ ನೀಡಲಾಗಿತ್ತು. ಹೀಗಿದ್ದರೂ, ಅವರು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಖುದ್ದು ಹಾಜರಿದ್ದು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸಬೇಕಿರುತ್ತದೆ. ಆದಾಗ್ಯೂ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಿಲ್ಲ.

ಇದನ್ನೂ ಓದಿ | Lakshmi Hebbalkar: ಮಹಿಳೆಗೆ ಅನುಕಂಪ ಬೇಡ, ಪ್ರೋತ್ಸಾಹ ಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮುಖ್ಯ ಮಂತ್ರಿಗಳು ಚಾಲನೆ ನೀಡಿದಾಕ್ಷಣ ಯಂತ್ರ ಚಾಲನೆಗೊಳ್ಳದೇ ಸ್ಥಳದಲ್ಲಿ ಹಾಜರಿದ್ದ ಮಾಧ್ಯಮ, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿರವರು ಭಾಗವಹಿಸುವ ಕಾರ್ಯಕ್ರಮದ ಸ್ಥಳದಲ್ಲಿ ಹಾಜರಿದ್ದು ವ್ಯವಸ್ಥಿತವಾಗಿ ಕಾರ್ಯಕ್ರಮಗಳು ಯಶಸ್ವಿಗೊಳಿಸಲು ಸಹಕಾರಿಯಾಗದೇ, ಅವರ ಕರ್ತವ್ಯದಲ್ಲಿ ಅಸಡ್ಡೆ ಮತ್ತು ನಿರ್ಲಕ್ಷ್ಯತೆಯಿಂದಾಗಿ ಸರ್ಕಾರವನ್ನು ಮುಜುಗರಕ್ಕೆ ಒಳಪಡುವ ಸನ್ನಿವೇಶವನ್ನು ಸೃಷ್ಟಿಸಲು ಸಿ.ಎನ್ ಶ್ರೀಧ‌ರ್ ನೇರ ಕಾರಣಕರ್ತರಾಗಿದ್ದಾರೆ. ಕರ್ತವ್ಯಲೋಪ ಮತ್ತು ಶಿಷ್ಟಾಚಾರ ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಅಧಿಕಾರಿ ವಿರುದ್ಧ ಇಲಾಖಾ ತನಿಖೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Exit mobile version