ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶವನ್ನು (CET Rank) ಹೈಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆಯನ್ನು ಸೋಮವಾರ ಕರೆದಿದ್ದಾರೆ.
ದ್ವಿತೀಯ ಪಿಯುಸಿ ಅಂಕ ಪರಿಗಣಿಸುವಂತೆ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು (CET Repeaters) ಹೈಕೋರ್ಟ್ ಮೊರೆ ಹೋಗಿದ್ದರು. ವಾದ ವಿವಾದ ಆಲಿಸಿದ ಕೋರ್ಟ್, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಗಳಿಸಿದ ಶೇ.50 ಅಂಕ ಹಾಗೂ ಸಿಇಟಿಯಲ್ಲಿ ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸುವಂತೆ ಶನಿವಾರ ಆದೇಶಿಸಿತ್ತು.
ಹೀಗಾಗಿ ಯಾವ ರೀತಿಯಲ್ಲಿ ಅಂಕ ಪರಿಗಣಿಸಬೇಕು, ಎಲ್ಲ ವಿದ್ಯಾರ್ಥಿಗಳಿಗೂ ಹೊಸದಾಗಿ ರ‍್ಯಾಂಕ್ ಪರಿಗಣಿಸಬೇಕಾ ಎಂಬುದರ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನ ಕೆಇಎ ಬೋರ್ಡ್‌ನಲ್ಲಿ ಸಭೆ ಕರೆಯಲಾಗಿದ್ದು, ಬಳಿಕ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಏನಿದು ಪ್ರಕರಣ?
ಸಿಇಟಿ ರ‍್ಯಾಂಕಿಂಗ್‌ನಲ್ಲಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸುವಂತೆ ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಸುಮಾರು 24,000 ಮಂದಿ ರಿಪೀಟರ್ಸ್ ಪರೀಕ್ಷೆಯನ್ನು ತೆಗೆದುಕೊಂಡಿದ್ದರು. ಆದರೆ, ಕಳೆದ 2020-21ನೇ ಸಾಲಿನಲ್ಲಿ ಸಾಂಕ್ರಾಮಿಕ ಕೋವಿಡ್ ಸೋಂಕು ಹರಡುವ ಭೀತಿಯಿಂದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು.
ಈ ಕಾರಣದಿಂದ ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ನಿರ್ಧರಿಸಲಾಗಿತ್ತು. ಸಿಇಟಿ, ನೀಟ್ ಸೇರಿ ರಾಜ್ಯದಲ್ಲಿ ನಡೆದ ಎಲ್ಲ ವೃತ್ತಿಪರ ಕೋರ್ಸುಗಳಿಗೆ ಪಿಯುಸಿ ಅಂಕವನ್ನು ಪರಿಗಣನೆ ಮಾಡದಿರಲು ನಿರ್ಧರಿಸಲಾಗಿತ್ತು.
2022ನೇ ಸಾಲಿನಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ರಿಪೀಟರ್ಸ್‌ಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನು (CET Ranking) ಪರಿಗಣಿಸುವುದಿಲ್ಲವೆಂದು ಕೆಇಎ ಸ್ಪಷ್ಟಪಡಿಸಿತ್ತು. ಇದಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದವರಿಗೆ ಜಯ ಸಿಕ್ಕಿದೆ.
ಪರ ವಕೀಲರ ವಾದವೇನು?
ಚಿಕ್ಕಮಗಳೂರಿನ ಈಶ್ವರ್ ಎಂಬುವವರು ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೆಇಎ ಆದೇಶದ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರ ನೇತೃತ್ವದಲ್ಲಿ ನಡೆದ ವಾದ ವಿವಾದವನ್ನು ಆಲಿಸಿ, ವಿದ್ಯಾರ್ಥಿಗಳ ಮನವಿಯನ್ನು ಪುರಸ್ಕರಿಸಿದ್ದಾರೆ.
ಅರ್ಜಿದಾರರ ಪರ ವಕೀಲರು ನಡೆಸಿದ ವಾದದಲ್ಲಿ, ಕೆಇಎ ನಡೆಯು ವಿದ್ಯಾರ್ಥಿಗಳಿಗೆ ತಾರತಮ್ಯ ಎಸಗುವಂತಿದೆ. ಈ ಆದೇಶವು ಅತಾರ್ಕಿಕವಾಗಿದೆ. ಜತೆಗೆ ವಿವೇಚನೆಯಿಂದ ಕೂಡಿಲ್ಲ. ಪಿಯುಸಿ ಅಂಕಗಳನ್ನು ಪರಿಗಣಿಸದೇ ಸಿಇಟಿ ರ‍್ಯಾಂಕ್ ಪ್ರಕಟಿಸಿರುವುದು ಸಿಇಟಿ-2006 ಪ್ರವೇಶ ನಿಯಮಗಳ ಉಲ್ಲಂಘನೆಯಾಗಿದೆ. ಇದರಿಂದ ಪುನರಾವರ್ತಿತ ವಿದ್ಯಾರ್ಥಿಗಳ ಶ್ರೇಣಿ ಕಡಿಮೆಯಾಗಲಿದೆ ಎಂದು ಆಕ್ಷೇಪಿಸಿದ್ದರು.
ಇದನ್ನೂ ಓದಿ | ಮಗಳ ಸಾವಿಗೆ ಪರಿಹಾರ ಕೇಳಿ ಅರ್ಜಿ ಸಲ್ಲಿಸಿದ ತಂದೆ; ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಬಾಂಬೆ ಹೈಕೋರ್ಟ್