ಚಾಮರಾಜನಗರ/ಚಿಕ್ಕಮಗಳೂರು: ಆನೆ ದಾಳಿಗೆ (Elephant Attack) ಯುವಕನೊಬ್ಬ ಮೃತಪಟ್ಟಿದ್ದಾನೆ. ಚಾಮರಾಜನಗರದ ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕತ್ತೆಕಾಲು ಪೋಡು ಗ್ರಾಮದ ಮಾದ (23) ಮೃತ ದುರ್ದೈವಿ.
ಮಾದ ಹಿರಿಯಂಬಲ ಗ್ರಾಮಕ್ಕೆ ಹೋಗಿ ವಾಪಾಸ್ ಬರುತ್ತಿರುವಾಗ ಆನೆಯು ದಾಳಿ ನಡೆಸಿದೆ. ಆನೆ ದಾಳಿಯಿಂದ ಗಂಭೀರ ಗಾಯಗೊಂಡ ಮಾದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿ ಬೈಲೂರು ವಲಯದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮಸ್ಥರು ಆನೆಗಳನ್ನು ಕಾಡಿಗೆ ಓಡಿಸುವಂತೆ ಮನವಿ ಮಾಡಿದ್ದಾರೆ. ಜಮೀನು ಕೆಲಸಗಳಿಗೆ ಭಯದಲ್ಲೇ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಆನೆಗಳ ಹಾವಳಿಗೆ ಬೆಳೆ ನಾಶ
ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ತೋಟಗಳಿಗೆ ಆನೆಗಳು ನುಗ್ಗಿ ದಾಂಧಲೆ ಮಾಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶ ಮಾಡಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ತರುವೆ ಗ್ರಾಮದ ರೈತ ನವೀನ್ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆಯು ಅಡಿಕೆ, ಬಾಳೆ, ಕಾಫಿ ಬೆಳೆಯನ್ನು ಹಾಳು ಮಾಡಿವೆ.
ಕೊಟ್ಟಿಗೆ ಹಾರ ಸುತ್ತಮುತ್ತ ಗ್ರಾಮಗಳಲ್ಲಿ ಆನೆಗಳ ದಾಳಿಯು ಆತಂಕವನ್ನು ಸೃಷ್ಟಿಸಿದೆ. ಕಾಫಿ ತೋಟಕ್ಕೆ ಕೂಲಿ ಕಾರ್ಮಿಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟದ ಜತೆಗೆ ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆಗಾರರು ಕಂಗಾಲಾಗಿದ್ದಾರೆ. 3-4 ತಿಂಗಳಿಂದ ಮೂಡಿಗೆರೆಯಲ್ಲಿ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸುತ್ತಿದೆ. ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಜನರು ಆಕ್ರೋಶಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ