ಬೆಂಗಳೂರು: ಸುಳ್ಯದ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಂತರ ಭುಗಿಲೆದ್ದ ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಸರ್ಕಾರದ ವರ್ಷಾಚರಣೆಯನ್ನು ರದ್ದುಪಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಬೆಳಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 11.00ಕ್ಕೆ ಸುದ್ದಿಗೋಷ್ಠಿಯಲ್ಲಿ ವಿವಿಧ ಯೋಜನೆಗಳು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಕುರಿತು ಘೋಷಣೆ ಮಾಡಲಿದ್ದಾರೆ.
ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರೂ ತಿರುಗಿ ಬಿದ್ದಿದ್ದಾರೆ. ಇನ್ನೊಂದೆಡೆ ಪ್ರತಿಪಕ್ಷಗಳ ನಾಯಕರೂ ಬಿಜೆಪಿ ಸರ್ಕಾರದ ಮೇಲೆ ಮುಗಿ ಬಿದ್ದಿದ್ದಾರೆ. ಹಾಗಾಗಿ ಸಿಎಂ ಬೊಮ್ಮಾಯಿ ಅವರು ಒತ್ತಡಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪತ್ರಿಕಾಗೋಷ್ಠಿ ಮತ್ತು ಘೋಷಣೆ ಕುತೂಹಲ ಮೂಡಿಸಿದೆ.
ಮುಖ್ಯವಾಗಿ ಆರು ಇಲಾಖೆಗಳಿಗೆ ಸಂಬಂಧಪಟ್ಟಂತೆ ಸಿಎಂ ಹೊಸ ಯೋಜನೆಗಳನ್ನು ಪ್ರಕಟಿಸಬಹುದು ಎಂಬ ಮಾಹಿತಿ ವಿಸ್ತಾರ ನ್ಯೂಸ್‌ಗೆ ಸಿಕ್ಕಿದೆ. ರೈತರು, ಮಹಿಳೆಯರು, ಯುವಕರು ಮತ್ತು ಹಿಂದುಳಿದ ಸಮುದಾಯಗಳನ್ನು ಕೇಂದ್ರವಾಗಿಸಿ ಬೊಮ್ಮಾಯಿ ವಿಶೇಷ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದಲೂ ನೂತನ ಯೋಜನೆಗಳನ್ನು ಅವರು ಪ್ರಕಟಿಸುವ ಸಾಧ್ಯತೆ ಇದೆ.
ಸುಮಾರು 2000-3000 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಸಿಎಂ ಪ್ರಕಟಿಸುವ ಸಾಧ್ಯತೆ ಇದೆ. ಬೆಂಗಳೂರು ಅಭಿವೃದ್ಧಿ, ಕಂದಾಯ, ಕೃಷಿ, ಪಶುಸಂಗೋಪನೆ, ತೋಟಗಾರಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಯೋಜನೆಗಳನ್ನು ಮುಖ್ಯಮಂತ್ರಿ ಘೋಷಣೆ ಮಾಡುವ ಸಂಭವ ಇದೆ.
2023ರ ಚುನಾವಣೆ ದೃಷ್ಟಿಯಿಂದ ಈ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ. ಇತ್ತೀಚೆಗೆ ದೆಹಲಿಗೆ ಹೋದಾಗಲೂ ಅವರು ಈ ಬಗ್ಗೆ ವರಿಷ್ಠರ ಜತೆ ಚರ್ಚೆ ಮಾಡಿ ಬಂದಿದ್ದಾರೆ. ಜನ ಸಾಮಾನ್ಯರಿಗೆ ನೇರವಾಗಿ ತಲುಪುವ ಯೋಜನೆಗಳೇ ಹೆಚ್ಚಿರಲಿದೆ. ಸರ್ಕಾರದ ವರ್ಚಸ್ಸು ಹೆಚ್ಚಿಸುವ, ಜನರ ಮನೆ ಬಾಗಿಲಿಗೆ ಮುಟ್ಟುವ ರೀತಿಯಲ್ಲಿ ಹೊಸ ಯೋಜನೆ ರೂಪಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನೂ ಓದಿ | Praveen Nettaru | ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲು, ಪಕ್ಷದ ಜನೋತ್ಸವ ಕಾರ್ಯಕ್ರಮ ರದ್ದು