Site icon Vistara News

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ, 99 ಕೋಟಿ ರೂ.ಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ

mtb nagaraju

ಬೆಂಗಳೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಕುರಿತಾಗಿ ವಿಧಾನಸೌಧದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಚಿವ ಎಂಟಿಬಿ ನಾಗರಾಜ್‌ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ (ಜು.19) ಸಭೆ ನಡೆಸಲಾಯಿತು.

ಸಭೆಯಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರಾಜ್ಯದ 11 ಜಿಲ್ಲೆಗಳ 18 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಿರುವ 99.04 ಕೋಟಿ ರೂ.ಗಳ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಅಲ್ಲದೆ, ಈಗಾಗಲೇ ಅನುಮೋದನೆ ನೀಡಿರುವ ಕ್ರಿಯಾ ಯೋಜನೆಗಳ ಟೆಂಡರ್ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಆಗಸ್ಟ್ ತಿಂಗಳಲ್ಲಿ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ಎಂಟಿಬಿ ನಾಗರಾಜ್‌ ನಿರ್ದೇಶನ ನೀಡಿದರು.

ಇದನ್ನು ಓದಿ| ಬಿಜೆಪಿಯಲ್ಲಿ ಗುಂಪುಗಾರಿಕೆ ಇಲ್ಲ: ಸಚಿವ ಎಂಟಿಬಿ ನಾಗರಾಜು

ಇಂದಿನ ಸಭೆಯಲ್ಲಿ ಹಾಸನ ಜಿಲ್ಲೆ ಅರಸೀಕೆರೆ ನಗರಸಭೆಯ 20.29 ಕೋಟಿ. ರೂ, ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣ ಪಂಚಾಯಿತಿಯ 4.25 ಕೋಟಿ ರೂ., ಗದಗ ಜಿಲ್ಲೆಯ ಗದಗ-ಬೆಟಗೇರಿ ನಗರ ಸಭೆಯ 34 ಕೋಟಿ ರೂ., ವಿಜಯಪುರ ಜಿಲ್ಲೆ ಇಂಡಿ ಪುರಸಭೆಯ 8.5 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು.

ಈ ಯೋಜನೆಯಡಿ 117 ಪಟ್ಟಣ ಪಂಚಾಯಿತಿಗಳು ತಲಾ 5 ಕೋಟಿ ರೂ., 124 ಪುರಸಭೆಗಳು ತಲಾ 10 ಕೋಟಿ ರೂ. ಹಾಗೂ 38 ನಗರಸಭೆಗಳು ತಲಾ 30 ಕೋಟಿ ರೂ., 23 ಜಿಲ್ಲಾ ಕೇಂದ್ರದ ನಗರಸಭೆಗಳು ಮತ್ತು 1ನೇ ದರ್ಜೆ ನಗರಸಭೆಗಳು ತಲಾ 40 ಕೋಟಿ ರೂ. ಪಡೆಯಲಿವೆ. ಈ ಹಣದಲ್ಲಿ 2022-23ರಿಂದ 2023-24ನೇ ಸಾಲಿನ ಹಣಕಾಸು ವರ್ಷದವರೆಗೆ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಮಳೆ ನೀರು ಚರಂಡಿ ಅಭಿವೃದ್ಧಿ ಮತ್ತು ಕಟ್ಟಡ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ಇಲಾಖೆ ನಿರ್ದೇಶಕಿ ಶ್ರೀಮತಿ ಅರ್ಚನಾ, ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನು ಓದಿ| ಅಮೃತ ನಗರೋತ್ಥಾನ ಯೋಜನೆ ಎರಡೇ ವರ್ಷದಲ್ಲಿ ಪೂರ್ಣಗೊಳಿಸಲು ಸಿಎಂ ಸೂಚನೆ

Exit mobile version