ಚಿಕ್ಕಬಳ್ಳಾಪುರ/ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಬೃಹತ್ ಪ್ರತಿಭಟನೆ (Congress Protest) ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಸುಧಾಕರ್, ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಡಾ. ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹಾಗೂ ಮತ್ತಿತರೆ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ರಾಜ್ಯಪಾಲರ ಭಾವಚಿತ್ರ ಹಿಡಿದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರ ಮುಖವಾಡ ಧರಿಸಿದ ಕಾಂಗ್ರೆಸ್ ಕಾರ್ಯಕರ್ತರು ಅರೆ ಬೆತ್ತಲೆ ಮೆರವಣಿಗೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಜ್ಯಪಾಲರ ವಿರುದ್ಧದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ರಾಜ್ಯಪಾಲರ ಕ್ರಮ ಅಸಂವಿಧಾನಿಕ ಹಾಗೂ ರಾಜಕೀಯ ಪ್ರೇರಿತ, ದುರುದ್ದೇಶಪೂರಿತ ಕ್ರಮ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವದಲ್ಲಿ ಬಹುಮತದೊಂದಿಗೆ ಆಯ್ಕೆಯಾದ ಸರ್ಕಾರವೊಂದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಷಡ್ಯಂತ್ರದ ಮೂಲಕ ಅಸ್ಥಿರಗೊಳಿಸಲು ಮುಂದಾಗಿದ್ದು, ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಶುದ್ಧ, ಕಳಂಕರಹಿತ ರಾಜಕಾರಣ ಮಾಡಿಕೊಂಡು ಶೋಷಿತರು, ಹಿಂದುಳಿದವರ ಪರ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ಹೆಸರಿಗೆ ಮಸಿ ಬಳಿಯಲು ಎರಡೂ ಪಕ್ಷಗಳು ಹೊರಟಿವೆ. ಇದಕ್ಕೆ ಬೆನ್ನೆಲುಬಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಹೊರಟಿರುವುದು ಖಂಡನೀಯ ಎಂದರು.
ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವ ಕೆ.ಎಂ. ಮುನಿಯಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್. ಕೇಶವರೆಡ್ಡಿ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ: BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್ ಪ್ರಕಟ
ದೇವನಹಳ್ಳಿಯಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.