ಚಿಕ್ಕಬಳ್ಳಾಪುರ: ಇತ್ತೀಚೆಗೆ ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛಗೊಳಿಸಿದ ಪ್ರಕರಣ ವರದಿಯಾಗಿ ಕೋಲಾಹಲ ಉಂಟಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಒಂದರ ಹಿಂದೆ ಒಂದರಂತೆ ಪ್ರಕರಣಗಳು (Toilet Cleaning) ಬೆಳಕಿಗೆ ಬರುತ್ತಿವೆ. ಇದೀಗ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ವೈರಲ್ ಆಗಿದೆ. ಚಿಕ್ಕಬಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ಬೈನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ಇದಾಗಿದೆ.
ಏನಿದು ಘಟನೆ?
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಶೌಚಾಲಯ ಕ್ಲೀನ್ ಮಾಡುತ್ತಿದ್ದ ವಿಡಿಯೊವನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ. ಘಟನೆಗೆ ಕಾರಣವಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ʼʼಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎನ್ನುವ ಶಿಕ್ಷಣ ಇಲಾಖೆಯ ಆದೇಶವಿದೆ. ಅದನ್ನು ಗಾಳಿಗೆ ತೂರಿ ಶಿಕ್ಷಕರು ವಿದ್ಯಾರ್ಥಿನಿಯ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕುʼʼ ಎಂದು ಸ್ಥಳೀಯರು ಹೇಳಿದ್ದಾರೆ.
ಕೋಲಾರದ ಪ್ರಕರಣ
2023ರ ಡಿಸೆಂಬರ್ 17ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School)ಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಸಂಬಂಧ ಐವರು ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಾಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇದಾದ ಬಳಿಕ ಈ ಮಾದರಿಯ ಪ್ರಕರಣಗಳು ಬೆಳಕಿಗೆ ಬಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ಮಕ್ಕಳನ್ನು ಟಾಯ್ಲೆಟ್ ಕ್ಲೀನಿಂಗ್ಗೆ ಬಳಸುವಂತಿಲ್ಲ; ಮಹತ್ವದ ಆದೇಶ
ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸರ್ಕಾರ ಮಕ್ಕಳನ್ನು ಟಾಯ್ಲೆಟ್ ಕ್ಲೀನಿಂಗ್ಗೆ ಬಳಸುವಂತಿಲ್ಲ ಎಂದು ಮಹತ್ವದ ಆದೇಶ ಹೊರಡಿಸಿದೆ. ಜತೆಗೆ ಕೆಲವು ಮಾರ್ಗಸೂಚಿಯನ್ನೂ ಸಹ ನೀಡಿದೆ.
- ಉಲ್ಲೇಖಿತ ಸುತ್ತೋಲೆಯ ಅನುಸಾರ ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಗಳ ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳತಕ್ಕದ್ದು.
- ಒಂದು ವೇಳೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿಯಾಗಲಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
- ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು ಯಾವುದೇ ವಿದ್ಯಾರ್ಥಿಗಳು ಶಾಲಾ ಶೌಚಾಲಯಗಳ ತೊಡಗಿಸಿಕೊಂಡಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿರುತ್ತದೆ.
- ಶಾಲೆಗಳಿಗೆ ಕಾಲ ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಿ ಮತ್ತು ಶಾಲಾ ಅವಧಿಯಲ್ಲಿ ಈ ಶೌಚಾಲಯಗಳಿಗೆ ಬೀಗ ಹಾಕದೇ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಹಾಗೂ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬ ಅಂಶಗಳನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಮೂಲಕ ಸೂಚಿಸಲಾಗಿದೆ.
- ಶಾಲೆಯ ಸಂದರ್ಶನದ ವೇಳೆಯಲ್ಲಿ ಒಂದು ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಮೇಲ್ಕಂಡಂತೆ ತತ್ಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು (ಆಡಳಿತ)ರವರಿಗೆ ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಿಳಿಸಿದೆ.
- ಅದರಂತೆ ಇಂತಹ ಪ್ರಕರಣಗಳಲ್ಲಿ ತತ್ಕ್ಷಣವೇ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು(ಆಡಳಿತ)ರವರು ಮೇಲೆ ತಿಳಿಸಿರುವಂತೆ ಸಂಬಂಧಿಸಿದವರ ಮೇಲೆ ಜರೂರಾಗಿ ಕ್ರಮವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಅಥವಾ ನಿರ್ಲಕ್ಷತನ ತೋರಿದಲ್ಲಿ ಮತ್ತು ಇಂತಹ ಪ್ರಕರಣಗಳು ಮರುಕಳಿಸಿದಲ್ಲಿ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೆಶಕರು(ಆಡಳಿತ) ರವರನ್ನೇ ನೇರ ಹೊಣೆಗಾರರನ್ನಾಗಿಸಿ ಇಲಾಖೆ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
- ಇದೇ ರೀತಿ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿಯು ಸಹ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಗಳು ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಿದೆ.
ಮೇಲ್ಕಂಡ ಎಲ್ಲ ಅಂಶಗಳನ್ನು ಹಾಗೂ ಈ ಕುರಿತು ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಲು ಹಾಗೂ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಂಬಂಧಿಸಿದ ಎಲ್ಲ ಇಲಾಖಾಧಿಕಾರಿಗಳಿಗೆ ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: Toilet Cleaning: ಕುದಪಕುಂಟೆ ಶಾಲಾ ಮಕ್ಕಳಿಂದ ಟಾಯ್ಲೆಟ್ ಕ್ಲೀನಿಂಗ್ ; ಶಿಕ್ಷಕಿ ಸಸ್ಪೆಂಡ್