ಹಾಸನ/ಚಿಕ್ಕಮಗಳೂರು: ಮುಸ್ಲಿಂ ಪ್ರದೇಶಗಳಲ್ಲಿ ಸಾವರ್ಕರ್ ಫೋಟೊವನ್ನು (Savarkar Issue) ಯಾಕೆ ಹಾಕಬೇಕಿತ್ತು ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕೊಡಗಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಹೋದಲ್ಲೆಲ್ಲಾ ಇದೇ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ.
ಕೊಡಗಿನಿಂದ ಹಾಸನದ ಮೂಲಕ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಾಸನದಲ್ಲಿ ಅಡ್ಡಗಟ್ಟಲು ಯತ್ನಿಸಿದ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆನೆಮಹಲ್ ಬಳಿ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಬಜರಂಗದಳದ ಕಾರ್ಯಕರ್ತರನ್ನು ಚದುರಿಸಿ, ಸಿದ್ದರಾಮಯ್ಯ ಅವರ ಕಾರಿಗೆ ಮುಂದೆ ಸಾಗಲು ಅವಕಾಶ ಮಾಡಿಕೊಟ್ಟಿದ್ದಾರೆ.
ಸಾವರ್ಕರ್ ಫೋಟೊ ಹಿಡಿದ ಭಜರಂಗದಳದ ಕಾರ್ಯಕರ್ತರು ಈ ಪ್ರತಿಭಟನೆ ನಡೆಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್ ಖುದ್ದು ಸ್ಥಳದಲ್ಲಿದ್ದು ಪರಿಸ್ಥಿತಿ ನಿಭಾಯಿಸಿದ್ದಾರೆ. ಪ್ರತಿಭಟನಾಕಾರರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುತ್ತಿದ್ದರು.
ಶುಕ್ರವಾರ ಸಿದ್ದರಾಮಯ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿಯೂ “ಗೋ ಬ್ಯಾಕ್ ಸಿದ್ದರಾಮಯ್ಯʼʼ ಅಭಿಯಾನ ನಡೆಸುವುದಾಗಿ ಬಿಜೆಪಿ ಯುವ ಮೋರ್ಚಾ ಈಗಾಗಲೇ ಪ್ರಕಟಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಗೊಂಡಿದ್ದು, ಶುಕ್ರವಾರ ಅವರು ಭೇಟಿ ನೀಡುವ ಸ್ಥಳಗಳಲ್ಲಿ ಪ್ರತಿಭಟೆ ನಡೆಸಲಾಗುವುದು ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮಾಜಿ ಮುಖ್ಯಮಂತ್ರಿಗೆ ಹೆಚ್ಚಿನ ಭದ್ರತೆ ಒದಗಿಸಲಿದ್ದಾರೆ.
ಇದನ್ನೂ ಓದಿ | Shivamogga Clash | ಸಿದ್ದರಾಮಯ್ಯ ಪ್ರಚೋದನೆಯೇ ಸಾವರ್ಕರ್ ಬಗ್ಗೆ ವಿರೋಧ ಹೆಚ್ಚಲು ಕಾರಣ ಎಂದ ಆರಗ