ಬೆಂಗಳೂರು: ಚಿಕ್ಕಮಗಳೂರು-ಬೇಲೂರು-ಹಾಸನ-ಹೊಳೆನರಸೀಪುರ-ಬಿಳಿಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 373 ಆಗಿ ಮೇಲ್ದರ್ಜೆಗೇರಿಸಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದರಿಂದ ಚಿಕ್ಕಮಗಳೂರು ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.
ಈ ಹಿಂದೆ ಬೇಲೂರಿನಿಂದ ಬಿಳಿಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ-373 ಆಗಿ ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ಚಿಕ್ಕಮಗಳೂರಿನಿಂದ ಬೇಲೂರಿನವರೆಗೆ ಸುಮಾರು 25 ಕಿ.ಮೀ. ಕೈಬಿಟ್ಟು ಹೋಗಿತ್ತು. ಆದರೆ, ಸತತ ಪ್ರಯತ್ನದ ಫಲವಾಗಿ ಚಿಕ್ಕಮಗಳೂರು ಎ.ಐ.ಟಿ. ಸರ್ಕಲ್‌ನ ರಾಷ್ಟ್ರೀಯ ಹೆದ್ದಾರಿ-೧೭೩ ಪ್ರಾರಂಭವಾಗಿ ಬೇಲೂರು-ಹಾಸನ- ಹೊಳೆನರಸೀಪುರ-ಬಿಳಿಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 373 ಆಗಿ ಮೇಲ್ದರ್ಜೆಗೇರಿಸಿ ಕೇಂದ್ರ ಸರ್ಕಾರ ಗೆಜೆಟ್‌ನಲ್ಲಿ ಪ್ರಕಟಿಸಿದೆ ಎಂದು ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಿಂದ ಈ ರಸ್ತೆಯು ರಾಷ್ಟ್ರೀಯ ಹೆದ್ದಾರಿ ವಿಭಾಗಕ್ಕೆ ಹಸ್ತಾಂತರಿಸಿದ ನಂತರ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾರ್ಯ ಪ್ರಾರಂಭವಾಗಲಿದೆ. ಈ ರಸ್ತೆ ಅಭಿವೃದ್ಧಿಪಡಿಸುವುದರಿಂದ ಚಿಕ್ಕಮಗಳೂರಿನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚಾರ ಇನ್ನಷ್ಟು ಸುಗಮವಾಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ | ಹೈದರಾಬಾದ್‌ನಲ್ಲಿ ಕನ್ನಡಿಗರ ಸಮಾವೇಶ; ಮಾಜಿ ಸಿಎಂ ಯಡಿಯೂರಪ್ಪಗೆ ಆಹ್ವಾನ