ಚಿತ್ರದುರ್ಗ/ ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ (Self Harming) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವಳು.
ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನನ್ಲಾಗಿದೆ. ತರುಣ್ ಎಂಬಾತ ಪ್ರೀತಿ ಮಾಡುವಂತೆ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ನಡೆದಿದೆ. ಇಬ್ರಾಜ್ ಗುರುಂಗ(49) ಆತ್ಮಹತ್ಯೆಗೆ ಶರಣಾದವರು. ಅಸ್ಸಾಂ ಮೂಲದ ಇಬ್ರಾಜ್ ಗುರುಂಗ ಪ್ಯೊಚರ್ ಕಿಚನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂಡ್ಲವಾಡಿ ಬಳಿ ಬಾಡಿಗೆ ಮನೆಯಲ್ಲಿ ಮೂವರು ಸ್ನೇಹಿತರೊಂದಿಗೆ ವಾಸವಿದ್ದರು. ಕಳೆದ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ನೇಹಿತರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು
ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ – ರಾಜಾನುಕುಂಟೆ ರೈಲ್ವೆ ಮಾರ್ಗದ ಮಧ್ಯೆ ಘಟನೆ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.