Site icon Vistara News

Border Dispute: ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ವಿಮೆ ಜಾರಿ ಮಾಡಬೇಕಾಗುತ್ತದೆ ಹುಷಾರ್‌ ಎಂದ ಸಿಎಂ ಬಸವರಾಜ ಬೊಮ್ಮಾಯಿ

CM Basavaraj bommai warns maharashtra govt over border dispute

#image_title

ಬೆಂಗಳೂರು: ಕರ್ನಾಟಕದ ಗಡಿ ಭಾಗದ ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರದ ವಿಮಾ ಯೋಜನೆಯನ್ನು ಜಾರಿ ಮಾಡಲು ಮುಂದಾಗಿರುವ ಮಹಾರಾಷ್ಟ್ರದ ಶಿವಸೇನೆ-ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬೊಮ್ಮಾಯಿ, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು.

ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್‌ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು.

ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರಿಸಿದರೆ ಕರ್ನಾಟಕ ಸರ್ಕಾರವೂ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು. ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದಿದ್ದಾರೆ.

ಇದನ್ನೂ ಓದಿ: Border Dispute: ಅಮಿತ್‌ ಶಾ ಸಂಧಾನ ಸಭೆ ನಿರ್ಣಯದ ಉಲ್ಲಂಘನೆಯಾಗಿದೆ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಎಂ ಬೊಮ್ಮಾಯಿ ಆಕ್ರೋಶ

Exit mobile version