ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡುವುದಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಜನ ಸಂಕಲ್ಪ ಯಾತ್ರೆಯಲ್ಲಿ ಬ್ಯುಸಿಯಾಗಿದ್ದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ನಾನಾ ಭಾಗಗಳನ್ನು ಸುತ್ತಿದ್ದರು. ಈ ನಡುವೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ನವೆಂಬರ್ ೫ರಂದು ತಮ್ಮ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ್ದ ಅವರು ಇತರ ನಾಯಕರು ಜನ ಸಂಕಲ್ಪ ಯಾತ್ರೆಯನ್ನು ಮುಂದುವರಿಸುತ್ತಾರೆ. ನನಗೆ ವೈದ್ಯರು ಹತ್ತು ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಬರೆದುಕೊಂಡಿದ್ದರು.
ಕಳೆದ ೧೫ ದಿನಗಳಿಂದ ಅವರು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮೂಲವ್ಯಾಧಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಆರೋಗ್ಯ ಸುಧಾರಿಸುತ್ತಿದ್ದು, ಶನಿವಾರ ಮುಖ್ಯಮಂತ್ರಿಗಳು ಬಂದು ಕುಶಲ ವಿಚಾರಿಸಿದಾಗಲೂ ತುಂಬಾ ಲವಲವಿಕೆಯಿಂದಲೇ ಇದ್ದರು.
ಸಿಎಂಗೆ ಸ್ವಾಗತ
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದಾಗ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಮತ್ತಿತರರು ಹಾಜರಿದ್ದರು.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ಇದನ್ನೂ ಓದಿ CM Basavaraja bommai | ಹೂಡಿಕೆದಾರರ ಸಮಾವೇಶದಲ್ಲಿ ಕರಾವಳಿಗೆ 2 ಲಕ್ಷ ಕೋಟಿ ರೂ. ಬಂಡವಾಳ