ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಅಮರನಾಥದಲ್ಲಿ ಮೇಘಸ್ಫೋಟ ಉಂಟಾಗಿ ಸಮಾರು 15 ಯಾತ್ರಿಕರು ಮೃತಪಟ್ಟಿದ್ದಾರೆ. ರಾಜ್ಯದಿಂದ ನೂರಕ್ಕೂ ಹೆಚ್ಚು ಜನ ಅಮನಾಥ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸದ್ಯ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಾಗೂ ಅಲ್ಲಿನ ರಾಜ್ಯ ಸರ್ಕಾರದ ಜತೆ ಸಂಪರ್ಕದಲ್ಲಿದ್ದೇವೆ. ರಾಜ್ಯದ ಯಾತ್ರಿಕರಿಗಾಗಿ ಸಹಾಯವಾಣಿ ಆರಂಭಿಸಿದ್ದು, ಎನ್‌ಡಿಆರ್‌ಎಫ್, ಗಡಿ ಭದ್ರತಾ ಪಡೆಗಳು ರಕ್ಷಣಾ ಕಾರ್ಯ ನಡೆಸುತ್ತಿವೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ಹೆಲ್ಪ್‌ಲೈನ್ ತೆರೆದಿದ್ದೇವೆ, ಈಗಾಗಲೇ ಹೆಲ್ಪ್‌ಲೈನ್‌ಗೆ 15 ರಿಂದ 20 ಜನ ಕರೆ ಮಾಡಿದ್ದಾರೆ. ಯಾತ್ರಿಕರು ಯಾವುದೇ ಸಮಸ್ಯೆ ಇದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ ನೆರವು ಪಡೆಯಬಹುದು ಎಂದು ತಿಳಿಸಿದರು.
ಮಳೆ ಹಾನಿ ಬಗ್ಗೆ ಮಾತನಾಡಿದ ಅವರು, ಕೆಲವೆಡೆ ಈಗಾಗಲೇ ಮಳೆ ತೀವ್ರತೆ ಕಡಿಮೆಯಾಗಿದ್ದು, ಇನ್ನೂ ಎರಡ್ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಚಿವ ಆರ್.ಅಶೋಕ್ ಮಾತನಾಡಿ, ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಗೆ ಕೆಂದ್ರ ಸರ್ಕಾರದೊಂದಿಗೆ ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾತ್ರಿಕರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಲು ರಾಜ್ಯ ಸರ್ಕಾರ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಪ್ರಯತ್ನಿಸುತ್ತಿದೆ. ರಾಜ್ಯ ಸರ್ಕಾರದಿಂದಲೂ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಭಾಗದಿಂದ 15 ಕರೆಗಳು ಬಂದಿವೆ. ಹೀಗಾಗಿ ಯಾತ್ರಿಕರನ್ನು ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಅಮರನಾಥ ಯಾತ್ರಿಗಳನ್ನು ಕರೆತರಲು ತಂಡ ರಚಿಸಲಾಗಿದೆ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅತಿವೃಷ್ಟಿಯಿಂದ ಆಗಿರುವ ಹಾನಿ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | ಅಮರನಾಥ ಯಾತ್ರೆಗೆ ತೆರಳಿದ್ದ ರಾಜ್ಯದ ಯಾತ್ರಿಕರು ಸೇಫ್; ಯಾತ್ರೆ ರದ್ದಾದ ಹಿನ್ನೆಲೆ ವಾಪಸ್