ಬೆಂಗಳೂರು: ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ(Border Dispute) ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರನ್ನು ನೇಮಿಸಿದ ನಂತರ ಆಯೋಗದ ಮೊದಲ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಭಾನುವಾರ ನಡೆಸಿದರು.
ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ .ವಿ. ಪಾಟೀಲ್, ಹಿರಿಯ ವಕೀಲರಾದ ಉದಯ ಹೊಳ್ಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ | Karnataka Election 2023 | ಕಾಂಗ್ರೆಸ್‌ನಲ್ಲಿ ಸಿಎಂ ಗಾದಿಗೆ ಮುಂದುವರಿದ ಸಿದ್ದು VS ಡಿಕೆಶಿ ಪೈಪೋಟಿ
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಿವರಾಜ ಪಾಟೀಲ್ ಅವರನ್ನು ಗಡಿ ಮತ್ತು ನದಿ ವಿವಾದಗಳ ಅಧ್ಯಕ್ಷರಾಗಿ ನೇಮಿಸಿದ ನಂತರ ಮೊದಲ ಸಭೆ ನಡೆಸಲಾಯಿತು. ಡಿಸೆಂಬರ್ 30ರಂದು ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಗೆ ಬರುತ್ತಿದೆ. 2004ರಲ್ಲಿ ದಾವೆ ಹೂಡಿದ ಮೇಲೆ ಏನೇನಾಗಿದೆ, ಮುಂದಿನ ವಿಚಾರಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
2017ರಲ್ಲಿ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರು ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಬೇಕೆ ಬೇಡವೇ ಎಂದು ಪ್ರಶ್ನಿಸಿ ಆದೇಶ ಮಾಡಿದ್ದರು. ಹಾಗಾಗಿ ಇಂದು ಆ ಚರ್ಚೆ ನಡೆಯುತ್ತಿದೆ. ಮಹಾರಾಷ್ಟ್ರದವರು 2017ರ ಆದೇಶವನ್ನು ಪ್ರಶ್ನಿಸಿದ್ದರು. ಇದೆಲ್ಲದರ ಕುರಿತು ಚರ್ಚೆ ಮಾಡಿದ್ದೇವೆ ಎಂದರು.
ಸಂವಿಧಾನ, ಕಾನೂನು, ಅಂಕಿ ಅಂಶಗಳು ನಮ್ಮ ಪರವಾಗಿಯೇ ಇವೆ ಎಂದು ಶಿವರಾಜ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮಿತಿಯ ಇತರ ಸದಸ್ಯರೂ ಸಭೆಯಲ್ಲಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ನಾವು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಡಿಸೆಂಬರ್ 29ರಂದು ನವದೆಹಲಿಯಲ್ಲಿ ಮುಕುಲ್ ರೋಹಟಗಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇವೆ. ನಮ್ಮ ಗಡಿ, ನೆಲದ ರಕ್ಷಣೆಗೆ ನಾವು ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ | ವಿಸ್ತಾರ ವಿಶ್ಲೇಷಣೆ | ಮೀಸಲಾತಿ ʼಅಸ್ತ್ರʼವೇ ʼತಿರುಗುಬಾಣʼ ಆಗುವ ಅಪಾಯದ ಅಂಚಿನಲ್ಲಿ ಬಿಜೆಪಿ ಸರ್ಕಾರ