Site icon Vistara News

ಚರ್ಮಗಂಟು ರೋಗ ನಿರ್ವಹಣೆಗೆ ₹13 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿ ಸೂಚನೆ

disease

ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಜಾನುವಾರುಗಳ ಚರ್ಮಗಂಟು ರೋಗದ ಕುರಿತು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ 5 ಕೋಟಿ ರೂ. ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ ಒಟ್ಟು 8 ಕೋಟಿ ರೂ. ಬಿಡುಗಡೆ ಮಾಡುವಂತೆ ಸೂಚಿಸಿದರು.

ರಾಜ್ಯದ 28 ಜಿಲ್ಲೆಗಳ 160 ತಾಲ್ಲೂಕುಗಳ 4,380 ಗ್ರಾಮಗಳಲ್ಲಿ ಕಾಣಿಸಿಕೊಂಡಿವೆ. 45,645 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 26,135 ಜಾನುವಾರುಗಳು ಗುಣಮುಖವಾಗಿವೆ. 2,070 ಜಾನುವಾರುಗಳು ಮರಣ ಹೊಂದಿವೆ.

15 ಲಕ್ಷ ಲಸಿಕೆ ಒದಗಿಸಲು ಸೂಚನೆ
6.57 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಈ ಹಿನ್ನೆಲೆಯಲ್ಲಿ, ರೋಗ ತೀವ್ರವಾಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಲು ಬೊಮ್ಮಾಯಿ ಸೂಚಿಸಿದರು. ಕೂಡಲೇ 15 ಲಕ್ಷ ಡೋಸ್ ಲಸಿಕೆಗಳನ್ನು ಒದಗಿಸಬೇಕು. ಲಸಿಕೆ ಪೂರೈಕೆ ಕುರಿತು ಕೇಂದ್ರ ಸರ್ಕಾರ ಅನುಮೋದಿಸಿದ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ, ಲಸಿಕೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಿದರು. ರೋಗಪೀಡಿತ ಜಾನುವಾರುಗಳನ್ನು ಪ್ರತ್ಯೇಕಿಸಲು ಪ್ರತಿ ಗ್ರಾಮದಲ್ಲಿ ವ್ಯವಸ್ಥೆ ಮಾಡಬೇಕು. ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ಪರಿಹಾರವಾಗಿ ಒಟ್ಟು 2 ಕೋಟಿ ರೂ. ನೀಡಲಾಗಿದ್ದು, 46.15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಪರಿಹಾರ ತ್ವರಿತವಾಗಿ ವಿತರಿಸುವಂತೆ ಸೂಚಿಸಿದರು.

ಮನುಷ್ಯರಿಗೆ ಹರಡುವುದಿಲ್ಲ
ರೋಗಪೀಡಿತ ರಾಸುಗಳ ಹಾಲಿನಿಂದ ಮನುಷ್ಯರಿಗೆ ರೋಗ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಚರ್ಮಗಂಟು ರೋಗ ತೀವ್ರವಾಗಿರುವ ಹಾವೇರಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೋಗನಿಯಂತ್ರಣಕ್ಕೆ ತೀವ್ರ ಕ್ರಮ ಕೈಗೊಳ್ಳಬೇಕು. ಇತರ ಜಿಲ್ಲೆಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಲಸಿಕೆ ಅಭಿಯಾನ ತೀವ್ರಗೊಳಿಸಲು ಸಿಎಂ ತಿಳಿಸಿದರು.
ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ, ಆದೇಶ ಹೊರಡಿಸಿದ ರಾಜ್ಯ ಸರ್ಕಾರ

Exit mobile version