ಕೊಡಗು: ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಿಗಳ ಜತೆ ಸಭೆ ನಡೆಸಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸುತ್ತಿದ್ದಾರೆ. ಇದೇ ವೇಳೆ ಮಳೆಯಿಂದ ಹಾನಿಗೊಳಗಾದವರಿಗೆ ಪರಿಹಾರ ಚೆಕ್ ವಿತರಣೆ ಮಾಡಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜತೆ ಮಳೆ ಹಾನಿ ಪರಿಶೀಲನಾ ಸಭೆ ನಡೆಸಿದರು. ಕಂದಾಯ ಸಚಿವ ಆರ್.ಅಶೋಕ್, ಸಂಸದ ಪ್ರತಾಪ್ ಸಿಂಹ, ಸಚಿವರಾದ ಬಿ.ಸಿ.ನಾಗೇಶ್, ಸಿ.ಸಿ.ಪಾಟೀಲ್, ಶಾಸಕರಾದ ಬೋಪಯ್ಯ, ಅಪ್ಪಚ್ಚು ರಂಜನ್ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಡಿಕೇರಿಯ ಮಲ್ಲಿಕಾರ್ಜುನ ನಗರ ಬಡಾವಣೆಯಲ್ಲಿ ಮಳೆಯಿಂದ ಹಾನಿಗೊಂಡ ಮನೆಗಳನ್ನು ಪರಿಶೀಲನೆ ನಡೆಸಿದರು. ಹಾನಿಗೊಳಗಾದ ಮನೆಯ ಮಾಲೀಕರಾದ ಗೋಪಾಲ ಅವರ ಕುಟುಂಬಕ್ಕೆ ಒಟ್ಟು 1.05 ಲಕ್ಷ ರೂಪಾಯಿ ಪರಿಹಾರದಧನ ವಿತರಿಸಿದರು.
ಆತಂಕ ಪಡಬೇಕಿಲ್ಲ- ಬಿ.ಸಿ.ನಾಗೇಶ್
ಸಿಎಂ ಭೇಟಿಗೂ ಮುನ್ನ ಕೊಡಗಿನ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, 2018ರಲಿ ಸಂಭವಿಸಿದ ಪ್ರವಾಹ ಸಮಯದ ಮಾನದಂಡಗಳನ್ನು ಇಟ್ಟುಕೊಂಡು ಮಳೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯ ಜನ ಆತಂಕಪಡುವ ಅಗತ್ಯವಿಲ್ಲ, ಸರ್ಕಾರ ಜನರ ಜತೆಗಿದೆ ಎಂದರು.
ಜಿಲ್ಲೆಯಲ್ಲಿ 52 ಮನೆಗಳಿಗೆ ಭಾಗಶಃ ಹಾನಿ, 2 ಮನೆಗಗಳಿಗೆ ಸಂಪೂರ್ಣ ಹಾನಿಯಾಗಿದೆ. 3 ಸೇತುವೆ, 2 ದೇವಾಲಯಗಳಿಗೆ ಮಳೆಯಿಂದ ಹಾನಿಯಾಗಿದೆ. ಮಳೆಯಿಂದ ಹಾನಿಯಾದ ಮನೆಗಳಿಗೆ ಕೂಡಲೇ ಪರಿಹಾರ ವಿತರಿಸಲಾಗಿದೆ.
ಇದನ್ನೂ ಓದಿ | Chief Minister Tour | ಸಂಕಷ್ಟ ಕಾಲದಲ್ಲಿ ಜನರೊಂದಿಗಿದೆ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ