ಬೆಂಗಳೂರು: ವಿವಿಧೆಡೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣಗಳು (Toilet Cleaning) ಬೆಳಕಿಗೆ ಬರುತ್ತಿವೆ. ಕೋಲಾರದ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲಾ ಮಕ್ಕಳಿಂದ ಮಲ ಗುಂಡಿ ಸ್ವಚ್ಛತೆ ಪ್ರಕರಣದ ಬೆನ್ನಲ್ಲೇ ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವುದು ಕಂಡುಬಂದಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ. ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಾಲೆ-ಕಾಲೇಜುಗಳ ಹಾಸ್ಟೆಲ್‌ಗಳಲ್ಲಿಯೂ ಈ ಬಗ್ಗೆ ನಿಗಾವಹಿಸುವಂತೆ ಸಮಾಜ ಕಲ್ಯಾಣ ಸಚಿವರಿಗೂ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ | Toilet Cleaning: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸೋದಕ್ಕೆ ಬಿಡೋದಿಲ್ಲ, ಕಠಿಣ ಕ್ರಮ: ಡಿಕೆಶಿ ಗುಡುಗು
ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ.
— CM of Karnataka (@CMofKarnataka) December 23, 2023
ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು…
ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇರಬೇಕು ಮತ್ತು ಅವುಗಳನ್ನು ಪ್ರತಿದಿನ ಶುಚಿಗೊಳಿಸಲು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಒಂದು ಸಮೀಕ್ಷೆ ನಡೆಸಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ವರದಿ ತರಿಸುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಶಾಲೇಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನ್; ಮುಖ್ಯ ಶಿಕ್ಷಕಿ ಅಮಾನತು
ಬೆಂಗಳೂರು: ರಾಜಧಾನಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದರಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ (Toilet Cleaning) ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ನನ್ನ ತಪ್ಪಿಲ್ಲ, ಅಮಾನತು ಮಾಡಬೇಡಿ ಎಂದ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ
ಈ ಬಗ್ಗೆ ಅಮಾನತಾದ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿ, ನಾನು ಈ ಶಾಲೆಯಲ್ಲಿ ಇರಬಾರದೆಂದು ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ವಿದ್ಯಾರ್ಥಿಗಳಿಂದ ನಾನು ಟಾಯ್ಲೆಟ್ ಕ್ಲೀನ್ ಮಾಡಿಸಿಲ್ಲ. ನಾನು ರಜೆಯ ಮೇಲೆ ಹೋದಾಗ ಕ್ಲೀನ್ ಮಾಡಿಸಿದ್ದಾರೆ. ನನ್ನನ್ನು ಅಮಾನತು ಮಾಡದಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದರಹಳ್ಳಿ ಸರ್ಕಾರಿ ಶಾಲೆಯಲ್ಲಿ ಇಂಥದ್ದೊಂದು ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಶಾಲೆಯಲ್ಲಿ ಒಟ್ಟು 600 ಜನ ಮಕ್ಕಳಿದ್ದಾರೆ. ಅಲ್ಲದೆ, ಇಲ್ಲಿ ಮಕ್ಕಳೇ ಶೌಚಾಲಯವನ್ನು ಕ್ಲೀನ್ ಮಾಡಬೇಕು. ಅಲ್ಲದೆ, ಮಕ್ಕಳೇ ಶಿಕ್ಷಕರು ಊಟ ಮಾಡುವ ತಟ್ಟೆ ತೊಳೆಯಬೇಕು ಎಂಬ ಅಲಿಖಿತ ಕಾನೂನನ್ನು ಜಾರಿ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.
ಇದನ್ನೂ ಓದಿ | Hijab Row: ಹಿಜಾಬ್ ನಿಷೇಧ ವಾಪಸ್ ಮಾಡಿಲ್ಲ; ಉಲ್ಟಾ ಹೊಡೆದ ಸಿಎಂ!
ಪೋಷಕರಿಗೆ ವಿಷಯ ಗೊತ್ತಾಗಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಕ್ಕೆ ಪೋಷಕರು ಆಕ್ರೋಶವನ್ನು ಹೊರಹಾಕಿದ್ದಾರೆ. ಪೋಷಕರು ಸೇರುತ್ತಿದ್ದಂತೆ ಶಿಕ್ಷಕರು ಶಾಲೆಗೆ ತಡವಾಗಿ ಬಂದಿದ್ದಾರೆ. ಈ ಹಿಂದೆಯೂ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಲಾಗಿತ್ತು. ಈ ಬಗ್ಗೆ ಪೋಷಕರು ದೂರು ಕೂಡಾ ನೀಡಿದ್ದರು. ಆದರೆ, ಅದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ಹೇಳಿ ಪ್ರಕರಣವನ್ನು ಕೈಗಬಿಡಲಾಗಿತ್ತು. ಈಗ ವಿಡಿಯೊ ಸಮೇತ ಸಾಕ್ಷಿ ಸಿಕ್ಕಿದ್ದು, ಶಾಲಾ ಶಿಕ್ಷಕರ ವಿರುದ್ಧ ಪೋಷಕರು ಕೆಂಡ ಕಾರಿದ್ದಾರೆ. ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.