Site icon Vistara News

ಕಲುಷಿತ ನೀರು ಸೇವಿಸಿ ಮೂವರ ಸಾವು: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

CM basavaraja bommai

ಬೆಂಗಳೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ. ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮಳೆ ಬಂದು ಪೈಪ್‌ ಸೋರಿಕೆಯಿಂದ ನೀರು ಕಲುಷಿತಗೊಂಡಿದೆ ಎನ್ನಲಾಗಿದೆ. ಈ ಕುರಿತು ಸಂಪೂರ್ಣವಾಗಿ ತನಿಖೆ ನಡೆಸಿ ತಾಂತ್ರಿಕ ವರದಿ ಸಲ್ಲಿಸಲು ಕೆಡಬ್ಲ್ಯುಎಸ್‌ಎಸ್‌ಬಿ ಮುಖ್ಯ ಎಂಜಿನಿಯರ್‌ಗೆ ಸೂಚಿಸಲಾಗಿದೆ. ರಾಯಚೂರಿನ ಎಲ್ಲ ವಾರ್ಡ್‌ಗಳ ನೀರಿನ ಮಾದರಿಯನ್ನು ಪರೀಕ್ಷಿಸಲು ಜಿಲ್ಲಾಧಿಕಾರಿಗೆ ತಿಳಿಸಲಾಗುವುದು. ಕುಡಿಯುವ ನೀರಿನ ಸುರಕ್ಷತೆ ಬಗ್ಗೆ ಪ್ರಮಾಣೀಕರಣ ಆಗಬೇಕು. ಇದರಲ್ಲಿ ಏನಾದರೂ ಅಧಿಕಾರಿಗಳ ಲೋಪದೋಷವಿದೆಯೇ ಎಂಬುವುದರ ಬಗ್ಗೆ ಡಿವೈಎಸ್‌ಪಿ ನೇತೃತ್ವದಲ್ಲಿ ಪೊಲೀಸ್ ತನಿಖೆ ನಡೆಸಿ, ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ₹5 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ವಿಟಮಿನ್‌ ಡಿ ಕೊರತೆ ನೀಗಿಸಲು ಹಾಲು, ನೀರು ಪರಿಣಾಮಕಾರಿ; ಅಧ್ಯಯನ ವರದಿ

ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್ಲ ಜಿಲ್ಲೆಗಳಲ್ಲಿ ಸಭೆ ಮಾಡಿ ವರದಿ ನೀಡುತ್ತಾರೆ. ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪರಿಷ್ಕರಿಸಿದ ಪಠ್ಯ ಕೈಬಿಡಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಅವರ ಸರ್ಕಾರದಲ್ಲೀ ಪಠ್ಯ ಪರಿಷ್ಕರಣೆ ಆಗಿದ್ದು, ಹಲವು ಬದಲಾವಣೆ ಆಗಿವೆ. ಎಲ್ಲೆಲ್ಲಿ ತಪ್ಪಾಗಿದೆ ಅದನ್ನು ಸರಿಪಡಿಸಿ ಮರುಮುದ್ರಣ ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಟ್ಟು
ಇತ್ತೀಚೆಗೆ ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸುಮಾರು 50 ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಮಲ್ಲಮ್ಮ, ಅಬ್ದುಲ್ ಗಫರ್, ಅಬ್ದುಲ್ ನೂರ್ ಖಾನ್ ಎಂಬುವವರು ಮೃತಪಟ್ಟಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರಾಯಚೂರು ನಗರ ಬಂದ್‌ಗೆ ನಾಗರಿಕರ ವೇದಿಕೆ ಕರೆನೀಡಿದ್ದು, ಇದಕ್ಕೆ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಗೂ ರೈತಮುಖಂಡರು ಬೆಂಬಲ ನೀಡಿದ್ದಾರೆ. ಕಲುಷಿತ ನೀರು ಕುಡಿದು ಮೃತಪಟ್ಟವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು. ರೋಗಿಗಳ ಚಿಕಿತ್ಸಾ ವೆಚ್ಚವನ್ನು ನಗರಸಭೆಯೇ ಭರಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | ಚಡ್ಡಿಗೆ ಬೆಂಕಿ ಹಚ್ಚಿದರೆ ನಿಮ್ಮ ಬುಡವೇ ಬೂದಿಯಾಗುತ್ತದೆ: ಕೆ.ಎಸ್‌. ಈಶ್ವರಪ್ಪ ಕಿಡಿ

Exit mobile version