ಬೆಂಗಳೂರು: ಕಾಂಗ್ರೆಸ್‌ನೊಳಗೆ ಸಿಎಂ ಪದವಿ (Next CM) ಕಿತ್ತಾಟ ಮುಂದುವರಿದಿರುವ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪಕ್ಷದೊಳಗಿನ ನಾಯಕರಿಗೆ ಮೊಟಕಿದ್ದಾರೆ. ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ನಾನು ಸಿಎಂ-ನಾನು ಸಿಎಂ ಎಂದು ಹೇಳುವುದು ಸರಿಯಲ್ಲ ಎಂದಿದ್ದಾರೆ. ಈ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಯಾರಾಗಬೇಕು ಎಂಬುದು ಮೈಸೂರು, ಬೆಂಗಳೂರು, ಕಲಬುರಗಿಯಲ್ಲೋ ತೀರ್ಮಾನ ಆಗುವ ವಿಷಯ ಅಲ್ಲ. ಅದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ಯಾರಿಗೆ ನಾಯಕತ್ವ ಕೊಡಬೇಕು ಎಂಬುದನ್ನು ತೀರ್ಮಾನ ಮಾಡುತ್ತದೆ ಎಂದು ಖರ್ಗೆ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗಬೇಕು. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದೇ ಮುಖ್ಯ ಉದ್ದೇಶವಾಗಬೇಕೆಂದು ತಮ್ಮದೇ ಪಕ್ಷದ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಸಿದರು.
ಸಿಎಂ ರೇಸ್‌ನಲ್ಲಿ ಸಿದ್ದು-ಡಿಕೆಶಿ
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುವುದು ಕುತೂಹಲ ಮೂಡಿಸಿದೆ. ಈಗಾಗಲೇ ಒಂದು ಬಾರಿ ಸಿಎಂ ಆಗಿ ಆಡಳಿತ ನಡೆಸಿರುವ ಅನುಭವವಿರುವ ಸಿದ್ದರಾಮಯ್ಯ ಅವರೇ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಕೆಲವು ಕಡೆ ಸ್ವತಃ ಅವರೂ ಹೇಳಿದ್ದಾರೆ. ಆದರೆ ಸಿಎಂ ಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಪ್ರಬಲ ಆಕಾಂಕ್ಷಿಯಾಗಿರುವುದರಿಂದ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಿದೆ.
oರಾಜ್ಯ ಕಾಂಗ್ರೆಸ್ ಬಣದೊಳಗೆ ಮುಂದಿನ ಮುಖ್ಯಮಂತ್ರಿ ವಿಚಾರಕ್ಕೆ ದೊಡ್ಡ ಪೈಪೋಟಿಯೇ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಜತೆಗೆ ಉಪ ಮುಖ್ಯಮಂತ್ರಿಯನ್ನೂ ತಾವೇ ನಿರ್ಧರಿಸಿಕೊಂಡು ಕಾರ್ಯಕ್ರಮಗಳಲ್ಲಿ ಘೋಷಣೆ ಕೂಗುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಸಿಎಂ ಪಟ್ಟಕ್ಕೆ ಕಿತ್ತಾಡುವ ಬದಲು ಮೊದಲು ಪಕ್ಷ ಗಟ್ಟಿಗೊಳಿಸುವ ಕಾರ್ಯದಲ್ಲಿ ತೊಡಗಿ ಎಂಬ ಸಂದೇಶ ನೀಡಿದ್ದಾರೆ.
ಇದನ್ನೂ ಓದಿ | ನಾನೂ CM ಆಗುವ ಅವಕಾಶವಿದೆ: ಸಿದ್ದರಾಮಯ್ಯ ತವರಲ್ಲೆ ಡಿ.ಕೆ. ಶಿವಕುಮಾರ್ ಹೇಳಿಕೆ