ಬೆಂಗಳೂರು: ಜನರ ಆಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ʼಜನತಾ ದರ್ಶನʼ ಕಾರ್ಯಕ್ರಮ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ರಜನೀಶ್ ಗೋಯೆಲ್ ಸುತ್ತೋಲೆ ಹೊರಡಿಸಿದ್ದಾರೆ. ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುಬೇಕು. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.
ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಜರೂರಾಗಿ ಸಮನ್ವಯ ಸಾಧಿಸಿಕೊಂಡು ಸೆ. 25ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸಿಕೊಳ್ಳುವುದು. ಜಿಲ್ಲಾಡಳಿತ ಆಯಾ ಜಿಲ್ಲೆಯ ಜನರಿಗೆ ಜನತಾ ದರ್ಶನ ನಡೆಯುವ ಸ್ಥಳ, ವೇಳೆ ಇತ್ಯಾದಿಗಳನ್ನು ಜಾಹೀರಾತು ಮುಖಾಂತರ ಮುಂಚಿತವಾಗಿಯೇ ತಿಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ | Drought in Karnataka: ಬರ ಘೋಷಣೆ ಮಾನದಂಡಗಳ ಪರಿಷ್ಕರಣೆ ಅಗತ್ಯ: ಸಿಎಂ ಸಿದ್ದರಾಮಯ್ಯ
ಕಾರ್ಯಕ್ರಮದ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಹಾಗೂ ಪ್ರತಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು, ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ IPGRS (Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿರ್ವಹಿಸುವುದು. ಸಂಬಂಧಿಸಿದ ಅರ್ಜಿಗಳನ್ನು ಬಹಳ ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಸಮಸ್ಯೆಗಳನ್ನು ಪರಿಹರಿಸುವಂತೆ ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತಾರೆ. ಆದರೆ, ಇಂತಹ ಅಹವಾಲುಗಳನ್ನು ಸ್ಥಳೀಯವಾಗಿ ಆಲಿಸಿ ಸೂಕ್ತ ಪರಿಹಾರ ಒದಗಿಸಲು ಪ್ರತಿ ಜಿಲ್ಲೆಯಲ್ಲೂ ʼಜನತಾ ದರ್ಶನʼ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ʼಜನತಾ ದರ್ಶನʼ ನಡೆಸಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ | BJP protest : ಮೋದಿ ಹುಟ್ಟುಹಬ್ಬದಂದೇ ರಾಜ್ಯಾದ್ಯಂತ ಬಿಜೆಪಿ ಹೋರಾಟ ಆರಂಭ; ಕುರುಡುಮಲೆ ದೇವಳದಿಂದಲೇ ಶುರು!
ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಜಿಲ್ಲಾ ಇ-ಆಫೀಸ್ ಸಮಾಲೋಚಕರನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ನಿರ್ದೇಶಕರ ಕಚೇರಿ, ಬೆಂಗಳೂರು ರವರ ದೂರವಾಣಿ ಸಂಖ್ಯೆ 080-22340369 ಸಂಪರ್ಕಿಸಬೇಕು ಎಂದು ಮಾಹಿತಿ ನೀಡಿದ್ದಾರೆ.