ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಕೊಪ್ಪಳದ ಗಿಣಿಗೇರ ಏರ್ಸ್ಟ್ರಿಪ್‌ನಲ್ಲಿ ಪ್ರತಿಕ್ರಿಯೆ ನೀಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಹೇಳಿದರು.
ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್‌ಐಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಆ್ಯಂಡ್ ರನ್ ಕೇಸ್ ಎಂದರು.
ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ
ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ, ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.
ಇದನ್ನೂ ಓದಿ | Brahmashri Narayanaguru Jayanti: ಸಮ ಸಮಾಜದ ನಿರ್ಮಾಣ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ
ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ
ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.
ಆಂತರಿಕ ಸಮಸ್ಯೆ ಸರಿಮಾಡಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ
ಬೆಂಗಳೂರು: “ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಬಿಜೆಪಿಯ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸದಾಶಿವನಗರದ ನಿವಾಸದ ಬಳಿ ಉತ್ತರಿಸಿದ ಅವರು, “ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು?” ಎಂದು ಕುಟುಕಿದರು.