Site icon Vistara News

CM Siddaramaiah : ಮೋದಿಯವರೇ ತಾಕತ್ತಿದ್ದರೆ ಗ್ಯಾರಂಟಿಗಳ ವಿರುದ್ಧ ಹೋರಾಟ ಘೋಷಿಸಿ; ಸಿದ್ದರಾಮಯ್ಯ ಸವಾಲು

Siddaramaiah Narendra Modi

ಬೆಂಗಳೂರು: ಕಾಂಗ್ರೆಸ್‌ ತನ್ನ ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರಂಟಿ ಯೋಜನೆಗಳ (Congress Guarantee) ಜಾರಿಯಿಂದ ಕರ್ನಾಟಕ ಸರ್ಕಾರದ (Karnataka Government) ಬೊಕ್ಕಸ ಖಾಲಿಯಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿ ಸವಾಲು ಹಾಕಿದ್ದಾರೆ. ಹಾಗಿದ್ದರೆ, ನೀವು ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಹೋರಾಟವನ್ನು ಘೋಷಿಸಿ ಎಂದು ಹೇಳಿದ್ದಾರೆ.

ಇದು ವೈಯಕ್ತಿಕ ನಿಲುವೇ? ಪ್ರಧಾನಿ ನಿಲುವೇ? ಬಿಜೆಪಿಯ ನಿಲುವೇ?

ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು.
ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿ ವಿಷಯವನ್ನೇ ಮುಂದಿಟ್ಟು ಲೋಕಸಭಾ ಚುನಾವಣೆ ಎದುರಿಸೋಣ

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದಿದ್ದಾರೆ ಸಿದ್ದರಾಮಯ್ಯ.

ಇಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ಬೆನ್ನು ಬಿದ್ದಿದ್ದಾರಲ್ಲಾ.. ಏನಂತೀರಿ?

ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?- ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ನಾವು ಕೊಟ್ಟರೆ ಫ್ರೀಬಿ, ರೇವ್ಡಿ; ನೀವು ಕೊಟ್ಟರೆ ಅದು ಏನೂ ಅಲ್ಲ, ಅದು ಹೇಗೆ?

ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ?

ಮ.ಪ್ರದೇಶ ಸಿಎಂ 3000 ರೂ. ಕೊಡ್ತೇವೆ ಅಂದ್ರಲ್ಲ.. ಅದು ಉಚಿತ ಅಲ್ವೇ?

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ?

ಕಿಸಾನ್‌ ಸಮ್ಮಾನ್‌ಗೆ ಏನು ಹೇಳ್ತೀರಾ? ಕೊಡ್ತಾ ಇರೋದು ಹಣಾನೇ ತಾನೆ?

ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ?

ನೀವು ಕೊಡೋ 5 ಕೆಜಿಯಿಂದ ಖಜಾನೆ ಬರಿದಾಗಲ್ಲ, ನಾನು ಕೊಟ್ರೆ ಮಾತ್ರನಾ?

ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ?

ಕೇಂದ್ರದ 8 ಉಚಿತ ಯೋಜನೆಗಳನ್ನು ನೀವು ಹೇಗೆ ಸಮರ್ಥಿಸುತ್ತೀರಿ?

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ?

ಸಾಧ್ಯವಿದ್ದರೆ ಕರ್ನಾಟಕದ ಮಾದರಿಯನ್ನು ದೇಶಕ್ಕೆ ಅಳವಡಿಸಿ

ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Narendra Modi: ಮುಸ್ಲಿಂ ಮಹಿಳೆಯರ ಜತೆ ರಕ್ಷಾಬಂಧನ ಆಚರಿಸಿ; ಬಿಜೆಪಿ ನಾಯಕರಿಗೆ ಮೋದಿ ಕೊಟ್ಟ ಟಾಸ್ಕ್‌ ಏನೇನು?

ಬೆಂಗಳೂರು: ಕಾಂಗ್ರೆಸ್‌ ತನ್ನ ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರಂಟಿ ಯೋಜನೆಗಳ (Congress Guarantee) ಜಾರಿಯಿಂದ ಕರ್ನಾಟಕ ಸರ್ಕಾರದ (Karnataka Government) ಬೊಕ್ಕಸ ಖಾಲಿಯಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿ ಸವಾಲು ಹಾಕಿದ್ದಾರೆ. ಹಾಗಿದ್ದರೆ, ನೀವು ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಹೋರಾಟವನ್ನು ಘೋಷಿಸಿ ಎಂದು ಹೇಳಿದ್ದಾರೆ.

Exit mobile version