ಬೆಂಗಳೂರು: ಈ ಬಾರಿ ಬೇಸಿಗೆ ಝಳಕ್ಕೆ ಕುಡಿಯುವ ನೀರಿನ ಮೂಲಗಳು ಬೇಗ ಬತ್ತಿಹೋಗಿದ್ದು, ಜನ ಹಾಗೂ ಜಾನುವಾರು ಬಳಕೆಗಾಗಿ ನೀರು ಬಿಡುಗಡೆ ಮಾಡಿ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಸಂಕಷ್ಟ ಎದುರಾಗಿದೆ.
ಬೇಸಿಗೆ ಕಾಲದಲ್ಲಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 3 ಟಿಎಂಸಿ ನೀರನ್ನು ಬಿಡುಗಡೆ ಮಾಡೆಬೇಕು ಎಂಬ ಕರ್ನಾಟಕದ ಮನವಿಯನ್ನು ಈ ಹಿಂದೆ ಮಹಾರಾಷ್ಟ್ರ ಸರ್ಕಾರ ಪರಿಗಣಿಸಿತ್ತು. 2023 ಮೇ ತಿಂಗಳ ಮೊದಲ ಭಾಗದಲ್ಲೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದಕ್ಕಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ.
ಇದೀಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮಾನವ ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಸಂಕಷ್ಟ ಪಡುವಂತಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಾನ್ಸೂನ್ ಇನ್ನೂ ಆರಂಭವಾಗಿಲ್ಲ.
ಕೊಯ್ನಾ ಜಲಾಶಯದಿಂದ 2 ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ 3 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.