Site icon Vistara News

CM Siddaramaiah: ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ ನೀಡಲು ಸಿದ್ದರಾಮಯ್ಯ ಸೂಚನೆ

CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಅತ್ಯಂತ ಮಹತ್ವದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳು ಅಂಗನವಾಡಿ, ಹಾಸ್ಟೆಲ್‌ಗಳು, ಶಾಲೆಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಯದರ್ಶಿಗಳ ನಡುವೆ ಸಮನ್ವಯ ಇರಬೇಕು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ

ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5,000 ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜುಲೈ 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಿಎಂ ಸೂಚಿಸಿದ್ದಾರೆ.

ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು. ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು. ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು. ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ಶಿಕ್ಷಣಕ್ಕೆ ಶೇ.25 ರಷ್ಟು ಅನುದಾನ

ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಬೇಕು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಅಂತರ್ಜಲ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ

ಇನ್ನು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್ ಡ್ಯಾಂಗಳಿಗೆ ಆಧ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು

ಮಾನವ ಅಭಿವೃದ್ಧಿ ಸೂಚ್ಯಂಕಗಳನ್ನು ಗಮನದಲ್ಲಿ ಇಟ್ಟುಕೊಂಡು ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಗತಿ ಕಾಣುವ ರೀತಿಯಲ್ಲಿ ಫಲಿತಾಂಶ ಬರುವಂತೆ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಅತ್ಯಂತ ಹಿಂದುಳಿದಿದ್ದು, ಈ ಜಿಲ್ಲೆಗಳನ್ನು ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಯಾವ ಯಾವ ಕ್ಷೇತ್ರದಲ್ಲಿ ಹಿಂದುಳಿದಿದ್ದೇವೆಯೋ ಆ ಕ್ಷೇತ್ರಗಳಿಗೆ ಒತ್ತು ನೀಡಬೇಕು. ಹಾಸ್ಟೆಲುಗಳು, ಅಂಗನವಾಡಿ ಹಾಗೂ ವಸತಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು. ಲಭ್ಯ ಅನುದಾನವನ್ನು ಆದ್ಯತೆಯ ಮೇರೆಗೆ ವೆಚ್ಚ ಮಾಡಬೇಕು. ರಸ್ತೆ, ಕುಡಿಯುವ ನೀರು, ನೀರಾವರಿ ಮತ್ತಿತರ ಮೂಲಸೌಕರ್ಯಗಳಿಗೆ ಒತ್ತು ನೀಡಬೇಕು ಎಂದು ಸಿಎಂ ತಿಳಿಸಿದರು.

ಸಿ.ಎಸ್.ಆರ್. ನಿಧಿಯಲ್ಲಿ ಶಾಲೆಗಳ ಅಭಿವೃದ್ಧಿ ಮಾಡಿ

ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಆಡಳಿತ ಇಲಾಖೆಗಳು ಮಂಜೂರಾತಿ ನೀಡಬೇಕು. ಸಿ.ಎಸ್.ಆರ್. ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿ ತೀವ್ರ ಕೊರತೆ ಇದ್ದು, ಶೀಘ್ರವೇ ಹುದ್ದೆ ಭರ್ತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರು.

ಇದನ್ನೂ ಓದಿ | Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪೂರ, ಎನ್. ಎಸ್. ಭೋಸರಾಜು, ಶಿವರಾಜ್ ತಂಗಡಗಿ, ಡಿ.ಸುಧಾಕರ್, ಕೆ.ಕೆ. ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Exit mobile version