ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಂದ (Congress Guarantee Scheme) ಹೊರಗೆ ಬರಲು ಹಲವು ದಾರಿಗಳನ್ನು ಹುಡುಕಾಡುತ್ತಿದೆ. ಈ ನಡುವೆ ಸರ್ಕಾರಿ ಇಲಾಖೆಯಲ್ಲಿ ಕೆಲವು ಅನಗತ್ಯ ಹುದ್ದೆಗಳಿಗೆ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಇದರ ಭಾಗವಾಗಿ ಈಗ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಇಲಾಖೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅಂಥವರನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಲು ಆದೇಶವನ್ನು ಹೊರಡಿಸಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿ ಅನಗತ್ಯ ಹುದ್ದೆ ಸೃಷ್ಟಿಗೆ ಸಿಎಂ ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಿವೃತ್ತಿ ಹೊಂದಿದ ಮೇಲೂ ಅನಗತ್ಯವಾಗಿ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿತ್ತು. ಇದೀಗ ಬೆಳಕಿಗೆ ಬಂದಿದ್ದು, ಕ್ರಮ ವಹಿಸಲಾಗಿದೆ.
ನಿವೃತ್ತಿ ಹೊಂದಿದ ಅಧಿಕಾರಿಗಳನ್ನು ಸಮಾಲೋಚಕರು/ವಿಶೇಷ ಸಂಪನ್ಮೂಲ ವ್ಯಕ್ತಿಗಳನ್ನಾಗಿ ನೇಮಿಸಲಾಗಿದೆ. ಅಲ್ಲದೇ ಕೆಲವು ಗ್ರೂಪ್ ಎ ವೃಂದದ ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಅಲ್ಲದೆ, ನಿವೃತ್ತ ನೌಕರರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುತ್ತಿದೆ. ಅಲ್ಲದೆ, ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ವದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಆದೇಶ
ಇದರ ಜತೆಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿಯೂ ಈ ರೀತಿ ನೇಮಕಾತಿ ನಡೆದಿದೆ. ಹಾಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿಕಾರಿ/ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸಲು ಸಿಎಂ ಆದೇಶ ಹೊರಡಿಸಿದ್ದಾರೆ.
ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚನೆ
ಸದರಿ ಹುದ್ದೆಗಳಿಗೆ ಹಾಲಿ ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿ/ನೌಕರರುಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಕೂಡಲೇ ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಈ ಸಿಎಂ ಕಚೇರಿಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Ram Mandir: ನಾನು ಯಾವ ದೇವಾಲಯಕ್ಕೂ ಹೋಗಲ್ಲ, ನನಗೆ ಭಕ್ತಿ ಇಲ್ಲ ಏನು ಮಾಡಲಿ? ಪ್ರಿಯಾಂಕ್ ಖರ್ಗೆ
ಸರ್ಕಾರಿ ಅಧಿಕಾರಿಗಳ ನೇಮಕ ಏಕೆ?
ಹೇಗೂ ಸರ್ಕಾರಿ ಅಧಿಕಾರಿಗಳಿಗೆ ವೇತನ ನೀಡಲೇಬೇಕು. ಅದೇ ಇಲಾಖೆಗಳಲ್ಲಿ ಅಗತ್ಯ ಇಲ್ಲದಿದ್ದರೂ, ನಿವೃತ್ತಿ ಹೊಂದಿದ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿದ್ದರಿಂದ ಅವರಿಗೆ ನೀಡುವ ವೇತನವು ಅನಗತ್ಯ ಖರ್ಚಾಗಿತ್ತು. ಈಗ ಅವರನ್ನು ಸೇವೆಯಿಂದ ಬಿಡುಗಡೆ ಮಾಡಿ ಆ ಜಾಗಕ್ಕೆ ಸರ್ಕಾರದ ಅಧಿಕಾರಿಗಳನ್ನೇ ನೇಮಕ ಮಾಡುವುದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ಉಳಿತಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂಥ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.