Site icon Vistara News

CM Siddaramaiah: ಮೇಕೆದಾಟು ಯೋಜನೆಗೆ ಅನುಮತಿ ಕೊಡಲು ಪ್ರಧಾನಿಗೆ ಸಿದ್ದರಾಮಯ್ಯ ಮೊರೆ

CM Siddaramaiah urges PM to give nod to Mekedatu project

ನವ ದೆಹಲಿ: ಗೃಹ ಸಚಿವ ಅಮಿತ್ ಶಾ (Home Minister Amit Shah) ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಒತ್ತಾಯಿಸಿದ್ದೇವೆ. ಅವರೂ ಸಹ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅಲ್ಲದೆ, ಮೇಕೆದಾಟು ಯೋಜನೆ (Mekedatu Project) ಕೈಗೊಳ್ಳಲು ಶೀಘ್ರ ಅನುಮತಿ ನೀಡುವಂತೆ ಸಹ ಪ್ರಧಾನಿಗೆ ಈ ಸಂದರ್ಭದಲ್ಲಿ ಮನವಿ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

ಮಹದಾಯಿ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗೋಷ್ಠಿಯಲ್ಲಿ ವಿವರಿಸಿದರು.

ನಿಗಮ – ಮಂಡಳಿ ನೇಮಕ ಶೀಘ್ರ

ಆದಷ್ಟು ಬೇಗ ನಿಗಮ – ಮಂಡಳಿಗೆ ಗಳಿಗೆ ನೇಮಕಾತಿಯನ್ನು ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಜಾಪ್ರಭುತ್ವ ವಿರೋಧಿ ಕ್ರಮ

ಸಂಸತ್ತಿನ ಇತಿಹಾಸದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ. ಚರ್ಚೆ ಪ್ರಜಾಪ್ರಭುತ್ವದ ಮೂಲ. ಬಲಾಢ್ಯ ವಿರೋಧ ಪಕ್ಷ ಇದ್ದಾಗ ಮಾತ್ರ ಸಾಧ್ಯ ಒಳ್ಳೇ ಸರ್ಕಾರ ರಚನೆ ಸಾಧ್ಯವಿದೆ. ಸರ್ಕಾರದ ತಪ್ಪುಗಳನ್ನು ಹೇಳುವಂಥ ಆರೋಗ್ಯಪೂರ್ಣ ವಾತಾವರಣ ಇರಬೇಕು. ಅವರ ಪಕ್ಷದ ಸಂಸದರನ್ನು ಮಾತ್ರ ಇಟ್ಟುಕೊಂಡು ಸಂಸತ್ ನಡೆಸುವುದು ನಾಚಿಕೆಗೇಡು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: CM Siddaramaiah: ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ; 18,177 ಕೋಟಿ ರೂ. ಬಿಡುಗಡೆಗೆ ಮನವಿ

ಜಾತಿ ಗಣತಿ ವರದಿಯನ್ನು ಇನ್ನೂ ಕೊಟ್ಟಿಲ್ಲ. ಕೆಲವರು ಊಹೆ ಮಾಡಿಕೊಂಡು ವಿರೋಧ ಮಾಡುತ್ತಿದ್ದಾರೆ. ಅವರು ವರದಿ ಯಾವಾಗ ಕೊಡುತ್ತಾರೆ ಎನ್ನುವುದನ್ನು ಖಚಿತವಾಗಿ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Exit mobile version