ಮೈಸೂರು: 1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ, ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು ಎಂದು ಕರೆ ನೀಡಿದರು.
2013-18ರ ವರೆಗೆ ನಾನು ಮುಖ್ಯಮಂತ್ರಿಯಾಗಿ ಎಷ್ಟು ಕೆಲಸ ಮಾಡಿದ್ದೆ. ಇಡೀ ರಾಜ್ಯದಲ್ಲಿ ಅನ್ನಭಾಗ್ಯದಿಂದ ರೈತರ ಸಾಲಮನ್ನಾವರೆಗೂ ಎಷ್ಟೆಷ್ಟು ಕೆಲಸ ಮಾಡಿದ್ವಿ. ಆದರೂ ನಮಗೆ 2018ರಲ್ಲಿ ಹಿನ್ನಡೆಯಾಗಿದ್ದು ನೋವು ತಂದಿದೆ ಎಂದು ಭಾವುಕರಾದರು.
ಇದನ್ನೂ ಓದಿ | Lok Sabha Electon 2024: ನಮ್ಮ ಜನಾಂಗದ ಲಕ್ಷ್ಮಣ್ ಗೆಲ್ಲಬೇಕು; ಸಚಿವ ವೆಂಕಟೇಶ್ ʼಒಕ್ಕಲಿಗʼ ಅಸ್ತ್ರ ಪ್ರಯೋಗ
ಚಾಮುಂಡೇಶ್ವರಿ ಕ್ಷೇತ್ರದ ಜನತೆ ತೀರ್ಮಾನ ಮಾಡಿದರೆ ಬಿಜೆಪಿ ಕತೆ ಮುಗಿಯತ್ತೆ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಇಲ್ಲಿ ಬಿಜೆಪಿ ಠೇವಣಿಯನ್ನು ಕಳೆದುಕೊಂಡಿರುವ ಉದಾಹರಣೆಯೇ ಹೆಚ್ಚು. ಆದರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳು ಕಣ್ಣಿಗೆ ಕಾಣುತ್ತಿವೆ. ಆದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದ ಜನ ತೀರ್ಮಾನ ಮಾಡಿದರೆ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕತೆ ಮುಗಿಯತ್ತೆ. ನನಗೆ ಮರ್ಯಾದೆ ಕೊಡಬೇಕೆಂದರೆ ಚಾಮುಂಡೇಶ್ವರಿಯಲ್ಲಿ ಲೋಕಸಭೆಗೆ ಅತಿ ಹೆಚ್ಚು ಲೀಡ್ ಕೊಡಿಸಿ ಎಂದು ಕೋರಿದರು.
ಚುನಾವಣೆ ಬಂತು ನೋಡಿ, ರಾಜ್ಯಕ್ಕೆ ಮೋದಿ ಬಂದ್ರು: ಸಿದ್ದರಾಮಯ್ಯ
ಮೈಸೂರು: ನಮ್ಮ ನಾಡಿಗೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ, ರಾಜ್ಯಕ್ಕೆ ಮೋದಿ ಬಂದ್ರು ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.
ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಪಾರ್ಲಿಮೆಂಟಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದರು.
ಮೋದಿಯವರು ಈ ಹತ್ತು ವರ್ಷದಲ್ಲಿ ಸುಳ್ಳು ಹೇಳಿ ಭಾರತೀಯರನ್ನು ಮರಳು ಮಾಡಿದ್ದು ಬಿಟ್ಟರೆ, ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ ಏಕೆ? ಹತ್ತು ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ ಹತ್ತು ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ ಎಂದು ಪ್ರಶ್ನಿಸಿದರು.
ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್? ಎಂದು ವ್ಯಂಗ್ಯವಾಡಿದರು.
ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಕ್ಕಿ, ಬೇಳೆ, ಎಣ್ಣೆ ಯಾವುದರ ಬೆಲೆಯೂ ಕಡಿಮೆ ಆಗಲಿಲ್ಲ. ಮೋದಿ ಪ್ರಕಾರ ಇದೇ ಅಚ್ಛೇ ದಿನ ಇರಬಹುದು. ಆದರೆ ನಿಜವಾದ ಅಚ್ಚೇ ದಿನ್ ನಿಮ್ಮಗೆ ಯಾರಿಗಾದರೂ, ಒಬ್ಬರಿಗಾದರೂ ಬಂದಿದೆಯಾ ಎಂದು ಪ್ರಶ್ನಿಸಿದರು.
ಜೆಡಿಎಸ್ನಲ್ಲಿ ಸೆಕ್ಯುಲರ್ ಪದವ ಕಿತ್ತಾಕೋದು ಉತ್ತಮ
ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ಸಿದ್ದರಾಮಯ್ಯರಿಗೆ ಗರ್ವ ಎನ್ನುತ್ತಿದ್ದಾರೆ ದೇವೇಗೌಡರು. ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ನಮ್ಮದು ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ ಎಂದರು.
ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ
ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಲಿದ ಜೆಡಿಎಸ್, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ. ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಿ ಎಂದರು.
ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಿ ಎಂದು ಪ್ರಶ್ನಿಸಿದರು.
ಇದನ್ನೂ ಓದಿ | Operation Hasta: ಮುಂದುವರಿದ ಆಪರೇಷನ್ ಹಸ್ತ; ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಇಡೀ ಬಳಗ ಕಾಂಗ್ರೆಸ್ ಸೇರ್ಪಡೆ
ಬರೀ ಶ್ರೀಮಂತರು ಹೊಟ್ಟೆ ತುಂಬಿಸಿಕೊಂಡು ಮಲಗೋದಲ್ಲ. ಬಡವರೂ ರಾತ್ರಿ ಹೊಟ್ಟೆ ತುಂಬ ಊಟ ಮಾಡಿ ಮಲಗಬೇಕು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದೆವು. ನಮ್ಮ ಭಾಗ್ಯಗಳೆಲ್ಲಾ ಬಡವರ ಬದುಕಿಗೆ ಆಸರೆಯಾದವು ಎಂದರು.