ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (yuvanidhi) ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ (Registration from December 21) ಪ್ರಕ್ರಿಯೆ ಆರಂಭ ಆಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಖಾತೆ ಸಚಿವ ಶರಣಪ್ರಕಾಶ್ ಪಾಟೀಲ್ (Sharana prakash Pateel) ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಚುನಾವಣೆಗೆ ಮೊದಲು ಮತದಾರರಿಗೆ ಪಂಚ ಗ್ಯಾರಂಟಿಗಳನ್ನು ನೀಡಿತ್ತು. ಚುನಾವಣೆಯಲ್ಲಿ ಗೆದ್ದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ, 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ, ಪ್ರತಿ ಮನೆಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಹಾಗೂ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2000 ರೂ ಡಿಬಿಟಿ ಮಾಡುವ ಗೃಹಲಕ್ಷ್ಮೀ ಯೋಜನೆಗಳನ್ನು ಆಗಲೇ ಜಾರಿಗೊಳಿಸಲಾಗಿದೆ. ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದು ಹಿಂದೆಯೇ ಘೋಷಿಸಲಾಗಿತ್ತು. ಇದೀಗ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ದಿನಾಂಕವನ್ನು ಪ್ರಕಟಿಸಲಾಗಿದೆ. ಯುವ ನಿಧಿ ಮೂಲಕ ರಾಜ್ಯದ 5 ಲಕ್ಷ ನವ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೊಮಾ ಹೋಲ್ಡರ್‌ಗಳಿಗೆ ನೇರವಾಗಿ ಹಣ ತಲುಪಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಏನಿದು ಯುವನಿಧಿ ಯೋಜನೆ? ಯಾರಿಗೆ ಸಿಗುತ್ತದೆ ಹಣ?
- ಯುವ ನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ.
- 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
- ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
- ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
- ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.
- ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.
ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.
— Dr. Sharan Prakash Patil (@S_PrakashPatil) December 12, 2023
ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ. pic.twitter.com/4fIGGDemYF
ಯುವ ನಿಧಿ ಯೋಜನೆ ಷರತ್ತುಗಳು ಇವು
- ‘ಸೇವಾ ಸಿಂಧು’ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು (ಇನ್ನಷ್ಟೇ ಲಿಂಕ್ ಜನರೇಟ್ ಆಗಬೇಕಾಗಿದೆ.
- ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿದರೆ ಸಾಕಾಗುತ್ತದೆ. ಆದರೆ, ಅಸತ್ಯದ ಪ್ರಮಾಣ ಸಲ್ಲದು.
- ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
- ತಿ ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
- ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.
ಇದನ್ನೂ ಓದಿ: Yuva Nidhi Scheme: ಜನವರಿಯಲ್ಲೇ ಯುವನಿಧಿ ಜಾರಿ; ಅರ್ಹತೆ ಯಾರಿಗಿದೆ? ಈ ದಾಖಲೆ ನಿಮ್ಮಲ್ಲಿರಲಿ!
ಯಾರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ?
- ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
- ಯಾವುದೇ ಅಪ್ರೆಂಟೀಸ್ ವೇತನ ಪಡೆಯುತ್ತಿರುವವರು.
- ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
- ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ
ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?
- ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
- ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತೆಗೆದಿಟ್ಟುಕೊಳ್ಳಿ.
- ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
- ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
- ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).
ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?
- ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಇನ್ನೂ ಅಧಿಕೃತವಾಗಿ ಹೇಳಿಲ್ಲ. ನಾವೇ ಮೊಬೈಲ್‌ನಲ್ಲಿ, ಕಂಪ್ಯೂಟರ್‌ಗಳಲ್ಲಿ ಅರ್ಜಿ ತುಂಬಬಹುದು. ಬೇರೆ ಕೇಂದ್ರಗಳ ಸಹಕಾರವನ್ನು ಕೂಡಾ ನೀಡಲಾಗುತ್ತದೆ ಎನ್ನಲಾಗಿದೆ.