Site icon Vistara News

Congress Protest: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಆಗ್ರಹ; ಕೇಂದ್ರದ ವಿರುದ್ಧ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

congress protest

#image_title

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಅಕ್ಕಿ ಪೂರೈಕೆಯಲ್ಲೂ ಮೋದಿ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕೈ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆ ತಡೆಗೆ ಹ್ಯಾಕಿಂಗ್‌ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ನಗರದ ಚೆನ್ನಮ್ಮ ವೃತ್ತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತಿತರರು ಇದ್ದರು.

ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತಿಲ್ಲ. ಇದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಹಣಕೊಟ್ಟು ಅಕ್ಕಿ ಖರೀದಿ ಮಾಡುತ್ತಿದ್ದೇವೆ. ಹಾಗೆಯೇ ಕೇಂದ್ರದಿಂದ ಅಕ್ಕಿ ಕೇಳುತ್ತಿಲ್ಲ ಎಂದು ಹೇಳಿದರು.

10 ಕೆಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ. ಒಂದು ತಿಂಗಳು ವಿಳಂಬ ಆಗಬಹುದು ಅಷ್ಟೇ ಎಂದ ಅವರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆ ಐದು ವರ್ಷ ಕೊಡುತ್ತೇವೆ ಎಂದ ಅವರು, ಗ್ಯಾರಂಟಿ ಯೋಜನೆಗಳನ್ನು ತಡೆಯಲು ನಮ್ಮ ಮಷಿನ್‌ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮಾತು ತಪ್ಪಿದೆ

ಕಾರವಾರ: ಕಾರವಾರದ ಸುಭಾಷ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಅಕ್ಕಿ ಕೊಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಅನ್ನ ಭಾಗ್ಯ ಯೋಜನೆಗೆ ತೊಂದರೆ ಕೊಡಲು ಕೇಂದ್ರ ಅಕ್ಕಿ ನೀಡುತ್ತಿಲ್ಲ. ಇದು ಸಣ್ಣತನದ ರಾಜಕೀಯ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದರು. ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಾರವಾರ ಶಾಸಕ ಸತೀಶ್ ಸೈಲ್, ಮಾಜಿ ಶಾಸಕ ವಿ.ಎಸ್ ಪಾಟೀಲ್ ಭಾಗಿಯಾಗಿದ್ದರು.

ಕೇಂದ್ರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ

ವಿಜಯಪುರ: ನಗರದ ಅಂಬೇಡ್ಕರ್ ಸರ್ಕಲ್ ಬಳಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೈ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೇಂದ್ರ ಅಕ್ಕಿ ಕೊಡದೇ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ್ ಗಣಿಹಾರ, ಗಂಗಾಧರ ಸಂಬಣ್ಣಿ, ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು, ಕಾರ್ಯಕರ್ತರು ಭಾಗಿಯಾಗಿದ್ದರು.

ಕೋಲಾರದಲ್ಲಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಡವರ ಸೇವೆಗೆ ಕೇಂದ್ರ ಅಡ್ಡಗಾಲು

ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಸಚಿವ ಡಿ. ಸುಧಾಕರ್ ಮಾತನಾಡಿ. ಕೇಂದ್ರವು ರಾಜ್ಯದ ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಹಾಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಫ್‌ಸಿಐಗೆ ಪತ್ರ ಬರೆದಾಗ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಅಕ್ಕಿ ದಾಸ್ತಾನು ಇಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಮಾಡುತ್ತಿರುವ ಬಡವರ ಸೇವೆಗೆ ಕೇಂದ್ರ ಅಡ್ಡಗಾಲು ಹಾಕುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಸೇರಿ ಹಲವರು ಭಾಗಿಯಾಗಿದ್ದರು.

ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಕ್ಕಿ ಕೊಳೆತು ಹೋಗುತ್ತಿದ್ದರೂ ಕೇಂದ್ರ ನೀಡುತ್ತಿಲ್ಲ

ರಾಯಚೂರು: ನಗರದ ಭಾರತ ಆಹಾರ ನಿಗಮ ಸಂಗ್ರಹಣಾ ಘಟಕ ಎದುರು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಹೋರಾಟ ನಡೆಸಿದರು.

ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ ಮಾತನಾಡಿ, ಎಫ್‌ಸಿಐ ಗೋದಾಮಿನಲ್ಲಿ ಅಕ್ಕಿ ಕೊಳೆತು ಹೋಗುತ್ತಿದೆ. ಬಡವರಿಗೆ ಹಂಚಲು ಅಕ್ಕಿ ಕೇಳುತ್ತಿದ್ದೇವೆ. ಆದರೆ. ಬಿಜೆಪಿ ಕೊಡುತ್ತಿಲ್ಲ. ಗ್ಯಾರಂಟಿ ಯೋಜನೆ ಭರವಸೆಯಂತೆ 10 ಕೆ.ಜಿ. ಅಕ್ಕಿ ಕೊಟ್ಟೆ ಕೊಡುತ್ತೇವೆ. ಬಿಜೆಪಿಯವರ ರಾಜಕೀಯವನ್ನು ಜನರಿಗೆ ತೋರಿಸಲು ಹೋರಾಟ ನಡೆಸಿದ್ದೇವೆ ಎಂದು ತಿಳಿಸಿದರು.

ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯದಲ್ಲಿ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಮಂಡ್ಯ: ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೈ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಹಾಡಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದರು. ಇದೇ ವೇಳೆ ಮೊಸರನ್ನ ವಿತರಣೆ ಮಾಡುವ ಮೂಲಕ ಕೇಂದ್ರದ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ರಮೇಶ್ ಬಾಬು, ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ.

ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ

ಹಾವೇರಿ: ನಗರದ ಪುರಸಿದ್ದೇಶ್ವರ ಗುಡಿಯಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಡವರ ಹೊಟ್ಟೆ ಮೇಲೆ ಕೇಂದ್ರ ಸರ್ಕಾರ ಹೊಡೆಯುತ್ತಿದೆ, ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಯುಬಿ ಬಣಕಾರ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ್, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಧಾರಾವಾಡ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ
ಉಸ್ತುವಾರಿ ಸಚಿವ ಸಂತೋಷ ಲಾಡ್ ಸೇರಿ ಹಲವರು ಭಾಗಿಯಾಗಿದ್ದರು.
ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
Exit mobile version