Site icon Vistara News

CM Siddaramaiah: ಸಿಎಂ ಸಿದ್ದರಾಮಯ್ಯಗೆ ಹತ್ತು ಸಾವಿರ ದಂಡ ವಿಧಿಸಿದ ಕೋರ್ಟ್!

CM Siddaramaiah

‌ಬೆಂಗಳೂರು: ಸಾರ್ವಜನಿಕ ಆಸ್ತಿ – ಪಾಸ್ತಿ ನಷ್ಟ (Loss of public property) ಮಾಡಿದ ಪ್ರಕರಣ ಸಂಬಂಧ ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ 10 ಸಾವಿರ ರೂಪಾಯಿ ದಂಡವನ್ನು ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಆಗ ಸಚಿವರಾಗಿದ್ದ ಕೆ.ಎಸ್.‌ ಈಶ್ವರಪ್ಪ ಅವರ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ ನಡೆಸಿತ್ತು. ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.

ಈ ಪ್ರಕರಣದಲ್ಲಿ ಮೃತ ಸಂತೋಷ್‌ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಆಗಿನ ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದರು.

ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗೌಂಡ್ರ್ಸ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಎನ್‌ಬಿಡಬ್ಲ್ಯೂ (ಜಾಮೀನು ರಹಿತ ಬಂಧನ ವಾರೆಂಟ್ )ಹಾಗೂ ವಿಶೇಷ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿ ಸಲ್ಲಿಸಿದ್ದರು. ಆದರೆ, ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ‌ಜತೆಗೆ ಮಾರ್ಚ್ 6ರಂದು ಸಿದ್ದರಾಮಯ್ಯ ಅವರು ವಿಶೇಷ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ಸೂಚಿಸಿದೆ.

ಅರ್ಜಿ ವಜಾಗೊಳಿಸಿದ ಕೋರ್ಟ್‌

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಮಾಡಿದ ಸಂಬಂಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶವನ್ನು ನೀಡಿದೆ.

ಮಾರ್ಚ್ 7 ರಂದು ರಾಮಲಿಂಗಾರೆಡ್ಡಿ, ಮಾರ್ಚ್ 11 ರಂದು ರಣದೀಪ್ ಸುರ್ಜೇವಾಲಾ, ಮಾರ್ಚ್ 15ರಂದು ಎಂ.ಬಿ.ಪಾಟೀಲ್ ಅವರಿಗೆ ಹಾಜರಾಗಲು ಕೋರ್ಟ್‌ ಸೂಚನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಮತ್ತಿತರರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್, ಅನಗತ್ಯವಾಗಿ ಪಿಎಸ್‌ಐ ಕು. ಜಹಿದಾ ಪ್ರತಿವಾದಿಯಾಗಿಸಿದ ಕಾರಣಕ್ಕೆ ದಂಡವನ್ನು ವಿಧಿಸಲಾಗಿದೆ.

ಇದನ್ನೂ ಓದಿ: Lok Sabha Election 2024: 28 ಲೋಕಸಭಾ ಕ್ಷೇತ್ರ ಗೆಲ್ಲಲು ಬಿಜೆಪಿ ಟಾಸ್ಕ್;‌ 10ಕ್ಕೂ ಹೆಚ್ಚು ಕ್ಷೇತ್ರದಲ್ಲಿದೆ ತೊಂದರೆ!

ಸಿಟಿ ಲೈಫ್ ಈಸ್ ಟಾರ್ಚರ್

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪರ ವಕೀಲರು, ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯ ಪರ ವಕೀಲರ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಜನಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಜನ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟವಾಗುತ್ತದೆ. “ಸಿಟಿ ಲೈಫ್ ಈಸ್ ಟಾರ್ಚರ್”,‌ ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ಸಮಸ್ಯೆಯಾಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

Exit mobile version