ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಭ್ರಷ್ಟಾಚಾರ ರೇಟ್ ಕಾರ್ಡ್‌ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಈಗ ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಕೋರ್ಟ್ ಮೆಟ್ಟಿಲೇರಿ ಮಾನನಷ್ಟ ಮೊಕ್ಕದ್ದಮೆಯನ್ನು (Defamation case) ದಾಖಲಿಸಿತ್ತು. ಇದೀಗ ಈ ಪ್ರಕರಣವು ವಿಚಾರಣೆಗೆ ಯೋಗ್ಯ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ. ಅಲ್ಲದೆ, ಈ ಪ್ರಕರಣವು ವಿಚಾರಣೆಗೆ ಯೋಗ್ಯವೆಂದು ಪರಿಗಣಿಸಿದೆ. ಹೀಗಾಗಿ ದೂರುದಾರರು ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸಲು ದಿನಾಂಕವನ್ನು ನಿಗದಿ ಮಾಡಿದೆ.
ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾ. ಜೆ. ಪೀತ್ ಅವರ ನ್ಯಾಯಪೀಠವು ವಿಚಾರಣೆ ನಡೆಸಲು ಅನುಮತಿ ನೀಡಿದೆ.
ಹೀಗಾಗಿ ಇವರಲ್ಲದೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರ ನಾಯಕರ ಹೆಸರುಗಳನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: Murdeshwar Beach: ಇದೆಂಥ ದುಸ್ಸಾಹಸ! ಮುರ್ಡೇಶ್ವರ ಕಡಲಲ್ಲಿ ಮುಳುಗಿದ ಪ್ರವಾಸಿಗ; ಇಬ್ಬರ ರಕ್ಷಣೆ
ಪತ್ರಿಕೆಗಳಲ್ಲಿ ಸುಳ್ಳು ಸುದ್ದಿ ಮತ್ತು ಸುಳ್ಳು ಆರೋಪಗಳ ಜಾಹೀರಾತು ಪ್ರಕಟ ಮಾಡಿರುವ ಆರೋಪ ಈಗ ಈ ಜನಪ್ರತಿನಿಧಿಗಳ ಮೇಲೆ ಕೇಳಿಬಂದಿದೆ. ಸಾರ್ವಜನಿಕರಿಗೆ ಸುಳ್ಳು ಮಾಹಿತಿ ಕೊಡಲಾಗಿದೆ. ಇದರಿಂದ ಬಿಜೆಪಿ ಹಾಗೂ ಬಿಜೆಪಿ ನಾಯಕರ ತೇಜೋವಧೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಬಿಜೆಪಿ ಪರವಾಗಿ ವಿವೇಕ್ ಸುಬ್ಬಾರೆಡ್ಡಿ ವಾದಿಸಿದ್ದಾರೆ.