Site icon Vistara News

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Minister Dinesh Gundurao instructed to prepare for the disaster management that may occur on the coast during rainy season.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಲು, ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Mangalore News) ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಆರಂಭಿಕ ಹಂತದಲ್ಲಿ ಸುಳ್ಯ, ಬೆಳ್ತಂಗಡಿ, ಸುಬ್ರಹ್ಮಣ್ಯದ ಕೆಲವೆಡೆ ನಾಲ್ಕೈದು ಕಡೆಗಳಲ್ಲಿ ಈ ಪ್ರತಿಬಂಧಕಗಳನ್ನು ಅಳವಡಿಸುವ ಬಗ್ಗೆ ಚರ್ಚೆ ನಡೆಸಿದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಕಳೆದ ಸುಮಾರು 10 ವರ್ಷಗಳಲ್ಲಿ ಈ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚಿನಿಂದ ಸಾವು ಹಾಗೂ ಆಸ್ತಿಪಾಸ್ತಿ ನಷ್ಟವಾಗಿರುವ ಪ್ರಕರಣಗಳು ನಡೆಯುತ್ತಿದೆ. ಎತ್ತರದ ಪ್ರದೇಶವಾಗಿರುವ ಕಾರಣ ಮಿಂಚಿನಿಂದ ಹೆಚ್ಚಿನ ಅಪಾಯ ಈ ಭಾಗದಲ್ಲಿ ಸಂಭವಿಸುತ್ತಿರುವುದಾಗಿ ಅಂದಾಜಿಸಲಾಗಿದ್ದು, ಹಾಗಾಗಿ ಪ್ರಾಯೋಗಿಕವಾಗಿ ಈ ಪ್ರದೇಶಗಳಲ್ಲಿ ಈ ಮಿಂಚು ಪ್ರತಿಬಂಧಕ ಅಳವಡಿಸಲು ಕ್ರಮ ವಹಿಸಿದೆ ಎಂದರು.

ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಸನ್ನದ್ಧರಾಗಿ

ಮಳೆಗಾಲದ ಸಂಭವಿಸಬಹುದಾದ ವಿಪತ್ತುಗಳನ್ನು ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಿರುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಾಕೃತಿಕ ವಿಕೋಪದ ಸಂದರ್ಭ ಉಪಯೋಗಿಸುವ ಯಂತ್ರೋಪಕರಣಗಳ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೆಂಪು ಮಣ್ಣಿನ ಕಾನೂನುಬಾಹಿರ ಗಣಿಗಾರಿಕೆ ಹಾಗೂ ಸಾಗಾಟದ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಅದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಲು ಸಚಿವರು ಸೂಚನೆ ನೀಡಿದರು.

ಬೋಳಿಯಾರುವಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಈಗಾಗಲೇ ಬಂಧಿಸಲಾಗಿದೆ. ಯಾರೇ ಕಾನೂನಿಗೆ ವಿರುದ್ಧ ಹೋದರೆ ಕಠಿಣ ಕ್ರಮ ವಹಿಸಲಾಗುತ್ತದೆ. ಅದರ ಬಗ್ಗೆ ಬಿಜೆಪಿಯವರು ಹೇಳುವ ಅಗತ್ಯವಿಲ್ಲ. ಯಾವುದೇ ಧರ್ಮ, ಜಾತಿ ಭೇದವಿಲ್ಲದೆ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: Health Benefits of Mango Leaves: ಮಾವಿನೆಲೆಗಳು ತೋರಣ ಕಟ್ಟಲಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು!

ಸಿಆರ್‌ಝಡ್ ಮತ್ತು ಸಿಆರ್‌ಝಡ್ ಅಲ್ಲದ ಪ್ರದೇಶಗಳಿಂದ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರೂ ಅಕ್ರಮ ಮರಳು ದಂಧೆ ಮುಂದುವರಿದಿದೆ. ಹೀಗಾಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಕುರಿತು ಸಭೆ ನಡೆಯಿತು. ಸಿಆರ್‌ಝಡ್ ಪ್ರದೇಶಗಳಲ್ಲಿ ಮರಳು ತೆಗೆಯಲು ಇರುವ ಎಲ್ಲಾ ಕಾನೂನು ಅಡೆತಡೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುರಸ್ತಿ 1 ವಾರದೊಳಗೆ ಪೂರ್ಣಗೊಳಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ, ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಚಿವರು, ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳು ಸುಗಮವಾಗಿ ಸಂಚರಿಸಲು ರಸ್ತೆಯನ್ನು ಅಭಿವೃದ್ಧಿಪಡಿಸಬೇಕು, ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು. ಮಳೆಗಾಲ ಪೂರ್ಣಗೊಳ್ಳುವವರೆಗೂ ಈ ಹೆದ್ದಾರಿ ಮೇಲೆ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.

ಬಿ.ಸಿ. ರಸ್ತೆಯಿಂದ ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ 75ರ ನಾಲ್ಕು ಪಥಗಳ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಅವರು ಮಳೆನೀರು ಚರಂಡಿಗಳ ಕಾಮಗಾರಿಯನ್ನು ಇಷ್ಟೊತ್ತಿಗೆ ಪೂರ್ಣಗೊಳಿಸಿರಬೇಕು. ಪೂಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಮಳೆಗಾಲದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪಿಡಬ್ಲ್ಯೂಡಿಯಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ತಕ್ಷಣವೇ ವಿಸ್ತರಣೆಯನ್ನು ಪರಿಶೀಲಿಸುತ್ತಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಳೆನೀರು, ಚರಂಡಿಗಳ ಹೂಳು ತೆಗೆಯುವಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.‌

ಕಡಬ, ಪುತ್ತೂರು ಭಾಗದಲ್ಲಿ ಆನೆಗಳ ಹಾವಳಿ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಕೇರಳದ ಹಿಂಡಿನ ಒಂದು ಆನೆ ದಾರಿ ತಪ್ಪಿ ಜಿಲ್ಲೆಗೆ ನುಗ್ಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಹಿಂಡಿಗೆ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಉಳ್ಳಾಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಕೊರೆತ ತಡೆಗೆ ತಾತ್ಕಾಲಿಕ ಕ್ರಮಕೈಗೊಳ್ಳಲಾಗುವುದು.

ಇದನ್ನೂ ಓದಿ: Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ರಾಷ್ಟ್ರೀಯ ಸುಸ್ಥಿರ ಕರಾವಳಿ ನಿರ್ವಹಣಾ ಕೇಂದ್ರ (ಎನ್‌ಸಿಎಸ್‌ಸಿಎಂ), ಚೆನ್ನೈಗೆ ಸಮುದ್ರ ಕೊರೆತವನ್ನು ಪರಿಶೀಲಿಸಲು ಕರಾವಳಿ ಬೆಲ್ಟ್‌ನಲ್ಲಿ ತೆಗೆದುಕೊಳ್ಳಬೇಕಾದ ಶಾಶ್ವತ ಕ್ರಮಗಳ ವರದಿಯನ್ನು ಸಲ್ಲಿಸಲು ಕೇಳಲಾಗಿದೆ. ಏತನ್ಮಧ್ಯೆ, ಸಮುದ್ರ ಕೊರೆತದಿಂದ ಭೂಮಿಗೆ ಅಪಾಯವಿರುವ ಬಟ್ಪಾಡಿಯ ಮರವಂತೆ ಬೀಚ್ ಮಾದರಿಯಲ್ಲಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲು ಬಂದರು ಇಲಾಖೆಯು 80 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಹೇಳಿದರು.

Exit mobile version