ಹೊನ್ನಾಳಿ: ವಿದ್ಯೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತು ಅಲ್ಲ, ವಿದ್ಯಾರ್ಥಿಗಳು (Students) ಶಿಸ್ತು (Discipline), ಶ್ರದ್ಧೆ, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುವ ಮೂಲಕ, ಜೀವನದಲ್ಲಿ ಉನ್ನತ ಹಂತ ತಲುಪಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಹೊನ್ನಾಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125ಕ್ಕೆ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಕುವರ, ಕನ್ನಡ ಕುವರಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಜತೆಗೆ ಮನೆಯಲ್ಲಿ ಪೋಷಕರು ಮಕ್ಕಳ ಕಲಿಕೆಯಲ್ಲಿ ಆಸಕ್ತಿ ಹೆಚ್ಚು ಆಗುವಂತೆ ನೋಡಿಕೊಳ್ಳಬೇಕು ಎಂದ ಅವರು, ದೇಶ ಅಭಿವೃದ್ಧಿಯಾಗಬೇಕಾದರೆ ವಿದ್ಯಾವಂತರ ಸಂಖ್ಯೆ ಹೆಚ್ಚಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: Job Fair: ಮೈಸೂರಿನಲ್ಲಿ ನ. 19ರಂದು ಅನ್ನದಾತರ ಮಕ್ಕಳಿಗೆ ಉದ್ಯೋಗ ಮೇಳ
ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿದರು.
ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ನಂಜುರಾಜ್ ಮಾತನಾಡಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪುರಸ್ಕಾರ ನೀಡಿದಾಗ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ 44 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಇದನ್ನೂ ಓದಿ: SBI Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ
ಈ ಸಂದರ್ಭದಲ್ಲಿ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಾಮದೇವಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ್, ಜಿಲ್ಲಾ ಗೌರವ ಕಾರ್ಯದರ್ಶಿ ರೇವಣಸಿದ್ದಪ್ಪ ಅಂಗಡಿ, ತಾಲೂಕು ಅಧ್ಯಕ್ಷ ಮುರಿಗಪ್ಪ ಗೌಡ, ಪ್ರಾಚಾರ್ಯ ಧನಂಜಯ್, ತಾಲೂಕು ಪದಾಧಿಕಾರಿಗಳಾದ ಗೋವಿಂದಪ್ಪ, ಶೇಖರಪ್ಪ, ಎನ್.ಕೆ. ಆಂಜನೇಯ ಹಾಗೂ ಹೋಬಳಿ ಘಟಕದ ಅಧ್ಯಕ್ಷ ಬಸವರಾಜಪ್ಪ, ಜಗನ್ನಾಥ್ ಕೆ. ಪಿ., ಎ.ಕೆ. ಹಾಲೇಶಪ್ಪ ರಾಂಪುರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.