ದಾವಣಗೆರೆ : ಯಾವುದೇ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ (Toilet Cleaning) ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸಬಾರದು ಎಂಬ ಸರ್ಕಾರದ ಮಾರ್ಗಸೂಚಿಯನ್ನು ಮೀರಿ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಮಾಡಿಸಿದ (Toilet Cleaning by Students) ಮತ್ತೊಂದು ಘಟನೆ ವರದಿಯಾಗಿದೆ. ಶಿಕ್ಷಣ ಸಚಿವರ ತವರಾಗಿರುವ ಶಿವಮೊಗ್ಗ, ರಾಷ್ಟ್ರ ರಾಜಧಾನಿ ಬೆಂಗಳೂರು, ಕೋಲಾರ, ಕಲಬುರಗಿಯ ಬಳಿಕ ಇಂಥಹುದೇ ಇನ್ನೊಂದು ಘಟನೆ ನಡೆದಿರುವುದು ದಾವಣಗೆರೆಯಲ್ಲಿ. ದಾವಣಗೆರೆಯಲ್ಲಿ (Govt. High School Davanagere) ಕೂಡ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸುವ ಅಮಾನವೀಯ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಮಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಲಾಗಿದೆ. ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತಕ್ಕೂ ಅಧಿಕ ಬಾಲಕಿಯರ ಮೂಲಕ ಶೌಚಾಲಯ ಸ್ವಚ್ಛಗೊಳಿಸಿದ್ದು ಬೆಳಕಿಗೆ ಬಂದಿದ್ದು ಇದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಬಕೆಟ್ ನಲ್ಲಿ ನೀರು ತಂದು ಪೊರಕೆಯಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಸ್ವತಃ ಗಾಂಧಿಜಿಯೇ ತಮ್ಮ ಶೌಚಾಲಯ ಸ್ವಚ್ಛ ಮಾಡಿಕೊಳ್ಳುತ್ತಿದ್ದರು. ನೀವು ಸ್ವಚ್ಚ ಗೊಳಿಸಿದರೆ ತಪ್ಪಿಲ್ಲ ಎಂದು ಎಂದು ಮುಖ್ಯ ಶಿಕ್ಷಕಿ ಸೂಚನೆ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಶಾಲಾ ಮಕ್ಕಳು ಶೌಚಾಲಯ ಸ್ವಚ್ಛ ಮಾಡುವ ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರು ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ ಅದನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿ ವಿದ್ಯಾರ್ಥಿನಿಯರನ್ನು ಅಮಾನವೀಯವಾಗಿ ಬಳಸಿಕೊಳ್ಳಲಾಗಿದೆ ಎನ್ನುವುದು ಅವರ ಆಕ್ರೋಶ.
ಈ ಹಿಂದಿನ ಟಾಯ್ಲೆಟ್ ಕ್ಲೀನಿಂಗ್ ಘಟನೆಗಳು
1.ಬೆಂಗಳೂರು ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿತ್ತು. ಈ ಸಂಬಂಧ ಶಾಲೆಯ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಬಂಧಿಸಲಾಗಿತ್ತು.
2. ಶಿವಮೊಗ್ಗದ ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂ ಗುಡ್ಡದ ನೇರಲೆಕೆರೆ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಕೈಗೆ ಪೊರೆಕೆ ನೀಡಿ ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಮಾಡಲಾಗಿತ್ತು.. ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
3. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು.
4.ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಜೋಹರ್ ಜಬೀನ ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ್ದರು.
5.ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಬೈನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೊವೊಂದು ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿ ಶಿಕ್ಷಕರ ಮೇಲೆ ಕೇಸು ದಾಖಲಾಗಿತ್ತು.
ಇದನ್ನೂ ಓದಿ : Toilet Cleaning: ವಿದ್ಯಾರ್ಥಿನಿ ಶಾಲೆ ಶೌಚಾಲಯ ಶುಚಿಗೊಳಿಸಿದ ಪ್ರಕರಣ; ಕ್ರಮ ಕೈಗೊಳ್ಳಲು ಹಿಂದೇಟು?
ಶೌಚಾಲಯ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಬಳಸದಂತೆ ಸೂಚನೆ
ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತೆ ಇಲ್ಲ ಎಂದು ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಒಂದು ವೇಳೆ ಇದನ್ನು ಮೀರಿ ಮಾಡಿಸಿದರೆ ಅಂಥವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವುದಲ್ಲದೆ, ಎಫ್‌ಐಆರ್ ಅನ್ನು ಸಹ ದಾಖಲು ಮಾಡಲಾಗುತ್ತದೆ ಎಂದು ಅದರಲ್ಲಿ ತಿಳಿಸಲಾಗಿತ್ತು.