ದಾವಣಗೆರೆ/ಚಾಮರಾಜನಗರ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಓರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಸಮೀಪ ಅಪಘಾತ (Road Accident) ನಡೆದಿದೆ.
ಬೈಕ್ ಅಪಘಾತದಲ್ಲಿ ಕೆ.ರಾಮೇನಹಳ್ಳಿ ಗ್ರಾಮದ ರಾಮಪ್ಪ (55) ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ರಾಮಪ್ಪರ ತಲೆಯೇ ಚೂರಾಗಿತ್ತು. ಇನ್ನೊಂದು ಬೈಕ್‌ನಲ್ಲಿದ್ದ ಮತ್ತಿಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸಿಮೆಂಟ್ ಲಾರಿ ಪಲ್ಟಿ; ಚಾಲಕ ಸಾವು.
ಚಾಮರಾಜನಗರ ಹನೂರು ಪಟ್ಟಣದ ಹುಲುಸುಗುಡ್ಡೆ ಬಳಿ ಸಿಮೆಂಟ್ ಲಾರಿ ಪಲ್ಟಿಯಾಗಿ ಚಾಲಕ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿಯಡಿ ಸಿಲುಕಿದ ಚಾಲಕ ಬಾಬು (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಿಮೆಂಟ್ ಲಾರಿಯು ತಮಿಳುನಾಡಿನಿಂದ ಮೈಸೂರಿಗೆ ತೆರಳುತ್ತಿದ್ದಾಗ, ಚಾಲಕ ಬಾಬು ಅವರ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಲಾರಿ ಕ್ಲೀನರ್ ಪವಾಡದಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹನೂರು ಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜೆಸಿಬಿ ಮೂಲಕ ಲಾರಿ ಮೇಲೆತ್ತಲು ಹರಸಾಹಸ ಪಟ್ಟರು. ಲಾರಿಯಡಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ಹೊತ್ತಿ ಉರಿದ ಬಸ್
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಬೆಂಕಿಗಾಹುತಿ ಆಗಿದೆ. ಬೆಳಗಾವಿಯ ಹುಕ್ಕೇರಿ ತಾಲೂಕಿನ ಹರಾಗಾಪೂರ ಗೇಟ್‌ನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.
ಚಾಲಕನ ಮುಂಜಾಗ್ರತೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬಸ್‌ನಲ್ಲಿದ್ದ 28 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ