ಬೆಂಗಳೂರು: ಅಧಿಕಾರ ವಿಕೇಂದ್ರೀಕರಣ ಗಾಂಧೀಜಿ (Gandhi Jayanti) ಅವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಾತ್ಮ ಗಾಂಧಿ ಅವರ ಕನಸಿನ ಅಧಿಕಾರ ವಿಕೇಂದ್ರೀಕರಣ ಮತ್ತು ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದವರು ದಿ. ರಾಜೀವ್ ಗಾಂಧಿ ಎಂದ ಅವರು, ಗ್ರಾಮಗಳ ಅಭಿವೃದ್ಧಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು ಎಂದು ವಿವರಿಸಿದರು.
ಇದನ್ನೂ ಓದಿ | CP Yogeshwar : ಸಂಕ್ರಾಂತಿ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ; ಸಿ.ಪಿ. ಯೋಗೇಶ್ವರ್ ಬಾಂಬ್
ಜನತಂತ್ರದ ವಿಕೇಂದ್ರೀಕರಣಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದವರು ರಾಜೀವ್ ಗಾಂಧಿ ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್. ಸ್ಥಳೀಯ ಸಂಸ್ಥೆ ಮತ್ತು ಪಂಚಾಯಿತಿಗಳಲ್ಲಿ ಶೇ. 50 ಮೀಸಲಾತಿ ಜಾರಿಗೆ ಆಗಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ ಎಂದು ತಿಳಿಸಿದರು.
ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮ ನ್ಯಾಯಾಲಯಗಳ ಸ್ಥಾಪನೆ
ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು. ಮಹಾತ್ಮ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | DK Shivakumar : ಪೂಜನೀಯ ದೇವೇಗೌಡರೇ ನಿಮ್ಮ ಮಗನ್ ಕಥೆ ಏನು? ; ಮಿಸ್ಟರ್ ಡಿಕೆ ಶಿವಕುಮಾರ್ ಹೇಳಿಕೆಗೆ ಕೌಂಟರ್!
ಖಾದಿ ಗ್ರಾಮೋದ್ಯೋಗ ಕೇಂದ್ರಗಳ ಅಭಿವೃದ್ಧಿ
ಖಾದಿ ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.