ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
(Department of School Education and Literacy) ಎಂದು ಮರುನಾಮಕರಣ ಮಾಡಲಾಗಿದೆ. ಈ ಬಗ್ಗೆ ರಾಜ್ಯಪಾಲರ ಆದೇಶಾನುಸಾರ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್. ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ದೇಶದ ಬಹುತೇಕ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿಯೂ ಈ ಅಂಶವನ್ನು ಪುನರುಚ್ಛರಿಸಲಾಗಿದೆ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ (ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನೊಳಗೊಂಡಂತೆ) ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ಎಂಬ ಪದನಾಮ ರೂಢಿಯಲ್ಲಿರುವುದರಿಂದ ರಾಜ್ಯದಲ್ಲಿಯೂ ಇದೇ ಮಾದರಿಯನ್ನು ಅಳವಡಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿದ್ದರು. ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಭಿಪ್ರಾಯ ಪಡೆದು ಕೂಲಂಕಷವಾಗಿ ಪರಿಶೀಲಿಸಿ ನಂತರ ಸರ್ಕಾರ ಇಲಾಖೆ ಮರುನಾಮಕರಣಕ್ಕೆ ಆದೇಶಿಸಿದೆ.