ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮೇಲಿದ್ದ ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ನೀಡಿದ್ದ ಕ್ರಮವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶಿಸಲಾಗಿದೆ.
ಈ ಹಿಂದೆ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಪಟ್ಟಂತೆ ಡಿ.ಕೆ. ಶಿವಕುಮಾರ್ ಅವರ ಮೇಲೆ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಆಗ ಈ ಅರ್ಜಿಯ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು, ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದ್ದಲ್ಲದೆ, ಡಿಕೆಶಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ್ದ ಡಿ.ಕೆ. ಶಿವಕುಮಾರ್ ಅವರು, ಹೈಕೋರ್ಟ್ ಮುಖ್ಯ ನಾಯಮೂರ್ತಿಯವರ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: Lok Sabha Election 2024: ಲೋಕಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ; ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯೊಡ್ಡಿದೆ. ಅಲ್ಲದೆ, ಸಿಬಿಐಗೆ ನೋಟಿಸ್ ಜಾರಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು, ಜುಲೈ 17ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.