ಬೆಂಗಳೂರು: ರಾಮ ಜನ್ಮಭೂಮಿ (Ram Janmabhoomi) ಹೋರಾಟಕ್ಕೆ ಸಂಬಂಧಪಟ್ಟಂತೆ 31 ವರ್ಷದ ಹಿಂದಿನ ಕೇಸ್‌ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮರು ಜೀವ ಕೊಟ್ಟಿದ್ದು, ಅವರನ್ನು ಬಂಧಿಸಲು ಮುಂದಾಗಿದೆ ಎಂದು ಬಿಜೆಪಿ ಕಿಡಿಕಾರಿದೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಬೆನ್ನಿಗೆ ಬಿಜೆಪಿ ನಿಂತಿದೆ. ಈಗಾಗಲೇ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರತಿಭಟನೆ ನಡೆಸಲೂ ಬಿಜೆಪಿ ಮುಂದಾಗಿದೆ. ಈಗ ವಿಪಕ್ಷ ನಾಯಕ ಆರ್. ಅಶೋಕ್ (Leader of the Opposition R Ashok) ನೇತೃತ್ವದ ಬಿಜೆಪಿ ನಿಯೋಗವು (BJP delegation) ರಾಮ ಭಕ್ತರಿಗೆ ಧೈರ್ಯ ಹೇಳಲು ಮುಂದಾಗಿದೆ.
ಬುಧವಾರ (ಜನವರಿ 3) ಹುಬ್ಬಳ್ಳಿಗೆ ಪ್ರವಾಸ ಕೈಗೊಳ್ಳಲಿರುವ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗವು, ಈ ಹಿಂದೆ (1992) ನಡೆದಿದ್ದ ಅಯೋಧ್ಯೆ ಗಲಾಟೆಯಲ್ಲಿ ಪ್ರಕರಣ ದಾಖಲಾಗಿ ಈಗ ಬಂಧನ ಭೀತಿ ಎದುರಿಸುತ್ತಿರುವವರ ಮನೆಗೆ ಭೇಟಿ ನೀಡಲಿದೆ. ಈ ವೇಳೆ ಪ್ರತಿಯೊಬ್ಬ ರಾಮಭಕ್ತರಿಗೂ ಧೈರ್ಯ ತುಂಬುವ ಕೆಲಸವನ್ನು ಬಿಜೆಪಿಯವರು ಮಾಡಲಿದ್ದಾರೆ.
ಏನಿದು ಪ್ರಕರಣ?
ಕರಸೇವೆಗೂ ಮುನ್ನ ಅಂದರೆ 1992ರ ಡಿಸೆಂಬರ್ 5ರಂದು ಹುಬ್ಬಳ್ಳಿಯೂ ಗಲಾಟೆಗಳು ನಡೆದಿದ್ದವು. ಈ ವೇಳೆ ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದು ಕಾರ್ಯಕರ್ತರು ಆ ವೇಳೆ ಕೆಲ ಕಾಲ ತಲೆಮರೆಸಿಕೊಂಡಿದ್ದರು. ಬಳಿಕ ಪ್ರಕರಣವು ಯಾವುದೇ ವಿಚಾರಣೆ ಕಾಣದೆ ಹಾಗೇ ಉಳಿದಿತ್ತು. ಪ್ರಕರಣ ತಿಳಿಯಾದಾಗ ಎಂದಿನಂತೆ ಎಲ್ಲರೂ ಮನೆಯಲ್ಲಿದ್ದರು.
30 ವರ್ಷದ ಹಳೇ ಕೇಸ್?
ಪ್ರಕರಣ ದಾಖಲಾದಾಗ ಆರೋಪಿತರು 30ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ಈಗ 31 ವರ್ಷಗಳ ಹಳೇ ಪ್ರಕರಣಕ್ಕೆ ಹುಬ್ಬಳ್ಳಿ ಪೊಲೀಸರು ಜೀವ ಕೊಟ್ಟಿದ್ದಾರೆ. ಹೀಗಾಗಿ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ. 31 ವರ್ಷದ ಬಳಿಕ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.
ಇದನ್ನೂ ಓದಿ: Rama Mandir : ಅಯೋಧ್ಯೆಯಲ್ಲಿ ಕರ್ನಾಟಕದ ಶಿಲ್ಪಿ ಕೆತ್ತಿದ ವಿಗ್ರಹ ಪ್ರತಿಷ್ಠೆ; ಪ್ರಲ್ಹಾದ್ ಜೋಶಿ ಹರ್ಷ
ಉಳಿದ ಆರೋಪಿಗಳಿಗೆ ಹುಡುಕಾಟ
ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ಪೊಲೀಸರು ಒಪ್ಪಿಸಿದ್ದರು. ಇನ್ನುಳಿದ ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ. ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿ ಹುಡುಕಾಟಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ರಾಮ ಜನ್ಮಭೂಮಿ (Ram Janmabhoomi) ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರದ (Ram Mandir) ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ.