ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಸಕಲ ರೀತಿಯಲ್ಲಿ ಸನ್ನದ್ಧರಾಗಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಮುಗಿಸಿ, ಇನ್ನೇನು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಸಿದ್ಧತೆ ನಡೆಸಿದ್ದಾರೆ. ಹಾಗೆಯೇ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಕನಸನ್ನೂ ಹೊಂದಿದ್ದಾರೆ. ಹೀಗಿರುವ ಮಧ್ಯೆಯೇ, ಡಿಕೆಶಿ ವಿರುದ್ಧ ಕೇಳಿಬಂದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಸೂಚಿಸಿದ್ದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ಚುನಾವಣೆಗೆ ಮೊದಲೇ ಡಿಕೆಶಿ ಅವರಿಗೆ ಸಂಕಷ್ಟ ಎದುರಾದಂತಾಗಿದೆ.
ಸಿಬಿಐ ತನಿಖೆಗೆ ವಹಿಸಿರುವುದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ನಟರಾಜನ್ ನೇತೃತ್ವದ ಏಕಸದಸ್ಯ ಪೀಠವು, ವಾದ-ಪ್ರತಿವಾದಗಳನ್ನು ಆಲಿಸಿ, ಡಿಕೆಶಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಡಿಕೆಶಿ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ. ಅಕ್ರಮವಾಗಿ ಆಸ್ತಿ ಗಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. 2019ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಆದಾಯ ತೆರಿಗೆ ಕಾನೂನುಗಳ ಪ್ರಕಾರ ಡಿ.ಕೆ.ಶಿವಕುಮಾರ್ ವಿರುದ್ಧ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈಗಾಗಲೇ ಸಿಬಿಐ ಶೇ.90ರಷ್ಟು ತನಿಖೆ ಪೂರ್ಣಗೊಳಿಸಿದೆ. ತನಿಖೆಯ ವರದಿಯನ್ನು ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ. ಹಾಗಾಗಿ, ಸರ್ಕಾರದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಲು ಆಗುವುದಿಲ್ಲ. ಡಿಕೆಶಿ ಅವರು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಹೇಗೆ ಗಳಿಸಿದರು ಎಂಬುದರ ಕುರಿತ ವಿವರಣೆಯನ್ನು ಕೋರ್ಟ್‌ಗೆ ಹಾಜರಾಗಿ ನೀಡಬೇಕು ಎಂದು ಇದಕ್ಕೂ ಮೊದಲು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಹೆಚ್ಚಿನ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಡಿಕೆಶಿ ಅವರು ಕನಕಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿ, ಪ್ರಚಾರ ಆರಂಭಿಸಿದ್ದಾರೆ. ಹೀಗಿರುವ ಮಧ್ಯೆಯೇ ಅವರಿಗೆ ಸಂಕಷ್ಟ ಎದುರಾಗಿದೆ.