ಬೆಂಗಳೂರು: ʻನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಈಗಾಗಲೇ ಆದಾಯ ತೆರಿಗೆ ಇಲಾಖೆಯು ಮೂರ್ನಾಲ್ಕು ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲಯವು ಎರಡು ಪ್ರಕರಣ ದಾಖಲಿಸಿದೆ. ಈಗ ಸಿಬಿಐ ಮೂಲಕ ಕೇಸು ದಾಖಲಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿರುವುದಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆʼ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಕುರಿತು ಸಿಬಿಐ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ರಾಜ್ಯ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆಯ ಡಿ.ಕೆ.ಶಿ ಪರ ವಕೀಲರು ಹೈಕೋರ್ಟ್‌ಗೆ ಈ ವಿಚಾರವನ್ನು ತಿಳಿಸಿದರು. ಹೈಕೋರ್ಟ್, ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿತು.
ಸಿಬಿಐ ತನಿಖೆಗೆ ಆಕ್ಷೇಪಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ಶುಕ್ರವಾರ ವಿಚಾರಣೆ ನಡೆಸಿತು.
ಡಿ.ಕೆ ಶಿವಕುಮಾರ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲರಾದ ಸಿ.ಎಚ್ ಜಾಧವ್ ಮತ್ತು ಸಂದೇಶ್ ಚೌಟ ಅವರು, ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರನ್ನು ಕಾನೂನಿನ ಬಲೆಯಲ್ಲಿ ಕಟ್ಟಿ ಹಾಕಲು ಈ ರೀತಿ ಮಾಡಲಾಗುತ್ತಿದೆ ಎಂದು ವಾದಿಸಿದರು. “ಡಿ ಕೆ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್ 13(1)(ಇ)ರ ಅಡಿ ಕುಟುಂಬ ಸದಸ್ಯರನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗದು” ಎಂದು ವಾದಿಸಿದರು.
ಸಿಬಿಐ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ ಪ್ರಸನ್ನಕುಮಾರ್ ಹಾಜರಿದ್ದರು. ಅರ್ಜಿದಾರರ ಪರ ವಕೀಲರ ವಾದವನ್ನು ಕೆಲ ಕಾಲ ಆಲಿಸಿದ ಪೀಠವು ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿತು.
ಏನಿದು ಪ್ರಕರಣ?
2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ–1988ರ ಕಲಂ 13 (2), 13 (1)(ಇ) ಅಡಿಯಲ್ಲಿ ದಾಖಲಿಸಲಾಗಿರುವ ಎಫ್‌ಐಆರ್ ಕಾನೂನು ಬಾಹಿರವಾಗಿದೆ. ಈ ಪ್ರಕರಣದ ಎಫ್‌ಐಆರ್‌ನಲ್ಲಿ ನನ್ನ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು. ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆ ಕೇವಲ ಸಾರ್ವಜನಿಕ ಸೇವಕರಿಗೆ ಮಾತ್ರವೇ ಅನ್ವಯ ಆಗುತ್ತದೆ. ಕುಟುಂಬದ ಸದಸ್ಯರ ವಿರುದ್ಧವೂ ಸಿಬಿಐ ಪ್ರಕರಣ ದಾಖಲಿಸಿರುವುದು ಕಾನೂನಿಗೆ ವಿರುದ್ಧವಾದ ಕ್ರಮವಾಗಿದೆ. ಆದ್ದರಿಂದ, ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಶಿವಕುಮಾರ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಇದನ್ನೂ ಓದಿ | ED vs DKS | ನ್ಯಾಷನಲ್ ಹೆರಾಲ್ಡ್ ತನಿಖೆ ರದ್ದು ಕೋರಿ ಅರ್ಜಿ: ಚುನಾವಣೆಗೆ ಮುನ್ನ ಬಂಧನಕ್ಕೆ ಸಂಚು ಎಂದ ಡಿಕೆಶಿ