Site icon Vistara News

DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

DCM DK Shivakumar

ಬೆಂಗಳೂರು: “ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಮನವಿ ಮಾಡಿದ್ದಾರೆ.

ರಾಜ್ಯದ ಹಲವೆಡೆ ಮಳೆಯಿಂದ ಪ್ರವಾಹ ಉಂಟಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.

ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

“ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಬೃಂದಾವನ ಮೇಲ್ದರ್ಜೆಗೆ ಏರಿಕೆ

ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

Exit mobile version