ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಹಿನ್ನಡೆಯಾಗಿದೆ. ಸಿಬಿಐ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ನ್ಯಾ. ಬೇಲಾ ತ್ರಿವೇದಿ ಪೀಠ ವಿಚಾರಣೆ ನಡೆಸಿದ್ದು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದೆ.
ಪ್ರಕರಣ ರದ್ದುಗೊಳಿಸಲು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023ರ ಅ. 19ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.
ಇದನ್ನೂ ಓದಿ | Midday meal workers: ಅಕ್ಷರ ದಾಸೋಹ ನೌಕರರ ಅನಿರ್ದಿಷ್ಟಾವಧಿ ಹೋರಾಟ ಆರಂಭ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ
ಏನಿದು ಪ್ರಕರಣ?
2013ರಿಂದ 2018ರ ಅವಧಿಯಲ್ಲಿ ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಸಿದ ಆರೋಪ ಡಿ.ಕೆ. ಶಿವಕುಮಾರ್ ಮೇಲೆ ಇತ್ತು. ಈ ಪ್ರಕರಣವನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ 2019ರಲ್ಲಿ ಸಿಬಿಐಗೆ ನೀಡಿತ್ತು. ಸಿಬಿಐಗೆ ಪ್ರಕರಣವನ್ನು ವಹಿಸಿದ್ದನ್ನು ಪ್ರಶ್ನೆ ಮಾಡಿದ್ದ ಡಿ.ಕೆ. ಶಿವಕುಮಾರ್ ಕೋರ್ಟ್ ಮೊರೆ ಹೋಗಿದ್ದರು. ಎಫ್ಐಆರ್ ಹಾಕದೇ ಕೇಂದ್ರೀಯ ತನಿಖಾ ತಂಡಕ್ಕೆ ನೀಡಿದ್ದು ಸರಿಯಲ್ಲ ಎಂದು ಕೋರ್ಟ್‌ನಲ್ಲಿ ಡಿಕೆಶಿ ಪ್ರಶ್ನೆ ಮಾಡಿದ್ದರು.
ಅಲ್ಲದೆ ಇದೇ ಪ್ರಕರಣದಲ್ಲಿ ಸುಮಾರು 48 ದಿನಕಾಲ ಡಿ.ಕೆ. ಶಿವಕುಮಾರ್ ಜೈಲು ಪಾಲಾಗಿದ್ದರು. ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ಕೊನೆಗೆ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆಯಲಾಗಿತ್ತು. ಈ ನಡುವೆ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಆದೇಶವನ್ನು ಹೊರಡಿಸಿತ್ತು. ಇಲ್ಲಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಸಿಬಿಐ ವಿಚಾರಣೆಯನ್ನು ಎತ್ತಿ ಹಿಡಿದು, ಪ್ರಕರಣ ರದ್ದುಗೊಳಿಸಲು ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು.