ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ನಡೆಸುತ್ತಿರುವ ತನಿಖೆಗೆ (CBI Investigation) ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ರಾಜ್ಯ ಹೈಕೋರ್ಟ್ (Karnataka High court) ಬಿಗ್ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಪರ ವಕೀಲರು ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ಇದಕ್ಕೆ ಸಿಬಿಐ ವಿರೋಧ ವ್ಯಕ್ತಪಡಿಸಿದರೂ ಹೈಕೋರ್ಟ್ ಅದನ್ನು ಪರಿಗಣಿಸಿಲ್ಲ.
ಮುಂದೇನಾಗುತ್ತದೆ?
ಈ ಪ್ರಕರಣದಲ್ಲಿ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರಿಸಬಹುದೇ ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಅಥವಾ ರಾಜ್ಯ ಸರ್ಕಾರ ತನ್ನ ಸಂಪುಟದ ಮೂಲಕ ಕೇಸನ್ನು ಹಿಂಪಡೆದ ಆದೇಶ ನಿಲ್ಲುತ್ತದೆಯೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಸಿಬಿಐ ತನಿಖೆ ಪ್ರಕರಣ ಮತ್ತು ಇಲ್ಲಿವರೆಗೆ ನಡೆದಿದ್ದೇನು?
- ಡಿ.ಕೆ ಶಿವಕುಮಾರ್ ಅವರು ಆದಾಯಕ್ಕಿಂತ ಅಧಿಕ ಆಸ್ತಿ ಸಂಗ್ರಹ ಮಾಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ 2019ರಲ್ಲಿ ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು.
- ಹಿಂದಿನ ಸರ್ಕಾರದ ಆದೇಶ ರದ್ದು ಕೋರಿ ಡಿಕೆ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು.
- ವಿಭಾಗೀಯ ಪೀಠದ ಮಧ್ಯಂತರ ತಡೆಯಾಜ್ಞೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
- ಎರಡು ವಾರಗಳಲ್ಲಿ ಮೇಲ್ಮನವಿ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ (supreme court) ಹೈಕೋರ್ಟ್ನ ವಿಭಾಗೀಯ ಪೀಠ ನಿರ್ದೇಶನ ನೀಡಿತ್ತು. ಡಿಕೆಶಿ ಸಲ್ಲಿಸಿದ್ದ ಮೇಲ್ಮನವಿ ಅಂತಿಮ ತೀರ್ಪನ್ನು ನೀಡಲು ಹೈಕೋರ್ಟ್ ನವೆಂಬರ್ 29ರ ದಿನವನ್ನು ನಿಗದಿಪಡಿಸಿತ್ತು.
- ಈ ನಡುವೆ ಹಾಲಿ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಇದಕ್ಕೆ ಸಿಬಿಐ ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವುದು ಕುತೂಹಲಕಾರಿ ಅಂಶವಾಗಿದೆ.
- ಇದೇ ವೇಳೆ, ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಇನ್ನು ನಡೆಯಬೇಕಾಗಿದೆ.
ಕೋರ್ಟ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸುಪ್ರೀಂಕೋರ್ಟ್ ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು. ಜತೆಗೆ ಉದಯ್ ಹೊಳ್ಳ ಹಾಜರಾಗಿದ್ದಾರೆ.