ಬೆಂಗಳೂರು: ಆಯುಧ ಪೂಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ ಹೊರಡಿಸಿರುವುದು ಕಂಡುಬಂದಿದೆ. ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಬಿಲ್ಡಿಂಗ್‌ನಲ್ಲಿ ಆಯುಧ ಪೂಜೆ (Ayudha Puja) ವೇಳೆ ಕೆಲ ಪೂಜಾ ಸಾಮಗ್ರಿಗೆ ನಿರ್ಬಂಧ ವಿಧಿಸಲಾಗಿದ್ದು, ಅರಿಶಿನ-ಕುಂಕುಮ, ಬೂದು ಕುಂಬಳಕಾಯಿ ಹಾಗೂ ದೀಪಗಳನ್ನು ಹೇಗೆ ಬಳಸಬೇಕು ಎಂಬುವ ಬಗ್ಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಆಯುಧ ಪೂಜೆಗೆ ರಾಜ್ಯ ಸರ್ಕಾರ ನಿಯಮ ರೂಪಿಸಿದ್ದು, ಕಡ್ಡಾಯವಾಗಿ ಸಿಬ್ಬಂದಿ ಪಾಲಿಸಬೇಕು. ಇಲ್ಲದಿದ್ದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಚ್ಚರಿಕೆ ನೀಡಿದೆ. ವಿಧಾನಸೌಧ ವಿಕಾಸಸೌಧ, ಬಹುಮಹಡಿ ಕಟ್ಟಡದ ನೆಲಹಾಸುಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ ಎಂಬ ಕಾರಣದಿಂದ ಪೂಜೆಯಲ್ಲಿ ರಾಸಾಯನಿಕ ಮಿಶ್ರಿತ ಅರಿಶಿನ-ಕುಂಕುಮ, ರಂಗೋಲಿಯನ್ನು ಬಳಸಬಾರದು ಎಂದು ಸೂಚಿಸಲಾಗಿದೆ.
ಸುತ್ತೋಲೆಯಲ್ಲಿ ಏನಿದೆ?
ವಿಧಾನಸೌಧ ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಸಮಯದಲ್ಲಿ ಕಚೇರಿಗಳ ಒಳಗೆ ಮತ್ತು ಕಾರಿಡಾರ್‌ಗಳಲ್ಲಿ ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಬಳಸುವುದರಿಂದ ಹಾನಿಕಾರಕ ಬಣ್ಣವು ನೆಲಹಾಸುವಿನ ಮೇಲೆ ಬಿದ್ದು, ಸುಮಾರು ತಿಂಗಳುಗಳ ಕಾಲ ಹಾಗೆಯೇ ಅಂಟಿಕೊಂಡು ಉಳಿಯುತ್ತದೆ. ಇದರಿಂದ ಕಟ್ಟಡಗಳ ಸೌಂದರ್ಯಕ್ಕೆ ಧಕ್ಕೆಯುಂಟಾಗುತ್ತದೆ.
ಆಯುಧ ಪೂಜೆ ಮಾಡುವಾಗ ಕಚೇರಿಯ ಒಳಗೆ, ಕಾರಿಡಾರ್‌ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಗಳಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣ, ಕುಂಕುಮ, ಅರಿಶಿನ, ಸುಣ್ಣ ಹಾಗೂ ಇನ್ನಿತರ ವಸ್ತುಗಳನ್ನು ಬಳಸಬಾರದು. ಇನ್ನು ಪೂಜಾ ದಿನದಂದು ಕಚೇರಿಯಿಂದ ಹೊರಡುವ ಮುನ್ನ ಪೂಜೆಯ ದೀಪಗಳು ಹಾಗೂ ವಿದ್ಯುತ್ ದೀಪಗಳನ್ನು ನಂದಿಸಿ ತೆರಳಬೇಕು. ಹಾಗೆಯೇ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೇ ವ್ಯವಸ್ಥಿತವಾಗಿ ವಿಲೇವಾರಿ ಮಾಡಬೇಕು ಎಂದು ಸಿಬ್ಬಂದಿಗೆ ಸೂಚಿಸಲಾಗಿದೆ.
ಇದನ್ನೂ ಓದಿ | Navaratri: ವಿಸ್ತಾರ ನವವರ್ಣ; ನೀಲಿ ದಿರಸಿನಲ್ಲಿ ಮಿಂಚಿದ ನೀರೆಯರು; ಇಲ್ಲಿವೆ ‘ಬ್ಲ್ಯೂ’ಟಿಫುಲ್ ಚಿತ್ರಗಳು
ಪಾರಂಪರಿಕ ಕಟ್ಟಡಗಳ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ, ನೌಕರರ ಅದ್ಯ ಕರ್ತವ್ಯವಾಗಿದ್ದು, ಸೂಚನೆಗಳನ್ನು ಸ್ವಯಂ ಪ್ರೇರಿತರಾಗಿ ಪಾಲಿಸುವ ಮನಸ್ಥಿತಿಯನ್ನು ರೂಢಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಅನಿವಾರ್ಯವಾಗಿ ಜವಾಬ್ದಾರಿಯನ್ನು ನಿಗದಿಪಡಿಸಬೇಕಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.