ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳಿಗೆ ದೇಶಾದ್ಯಂತ ಶೈಕ್ಷಣಿಕ ಪ್ರವಾಸ (Educational Tour) ಕೈಗೊಳ್ಳಲು ಅನುಮತಿ ನೀಡಲಾಗಿದ್ದು, ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.
ಶಾಲಾ ವಿದ್ಯಾರ್ಥಿಗಳನ್ನು ಹೊರರಾಜ್ಯಗಳ ಪ್ರವಾಸಕ್ಕೆ ಕರೆದೊಯ್ಯಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಅನುಮತಿ ಕೇಳಿದ್ದರು. ಹೀಗಾಗಿ ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯಲು ಅನುಮತಿ ನೀಡಲಾಗಿದೆ. ಜತೆಗೆ ರೈಲುಗಳಲ್ಲೂ ಪ್ರವಾಸಕ್ಕೆ ತೆರಳಬಹುದು, ಇದಕ್ಕೆ ಷರತ್ತುಗಳನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮತಿ ನೀಡಬಹುದು ಎಂದು ಆಯುಕ್ತೆ ಬಿ.ಬಿ. ಕಾವೇರಿ ತಿಳಿಸಿದ್ದಾರೆ.
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮಾರ್ಗದರ್ಶನ ಮತ್ತು ಅನುಮತಿ ನೀಡಲು ಕೋರಿದ ಹಿನ್ನೆಲೆಯಲ್ಲಿ ಷರತ್ತುಗಳ ಅನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿಗಳನ್ನು ಪರಿಶೀಲಿಸಿ ಅನುಮತಿ ನೀಡಲು ಸೂಚಿಸಲಾಗಿದೆ.
ಇದನ್ನೂ ಓದಿ | Raja Marga Column: ಯುವರಾಜ್ ಜೈನ್ ದುಡಿಮೆಗೆ ಕಲ್ಲಬೆಟ್ಟವೇ ಕರಗಿತು!; This is Excellent!
ಶೈಕ್ಷಣಿಕ ಪ್ರವಾಸಕ್ಕಿರುವ ಷರತ್ತುಗಳು
- ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು.
- ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದು.
- ಪ್ರವಾಸ ಶೈಕ್ಷಣಿಕ ಪ್ರವಾಸವಾಗಿರಲು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳುವುದು.
- ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಿರಬೇಕು.
- ಶೈಕ್ಷಣಿಕ ಪ್ರವಾಸವನ್ನು ಶಾಲಾ ದಿನಗಳಂದು ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಅಂದರೆ ಶನಿವಾರ ಪೂರ್ಣದಿನ/ ಭಾನುವಾರ ಶಾಲೆ ನಡೆಸಿ ಕೊರತೆ ಬೀಳುವ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸುವುದು.
- ಇಲಾಖೆಯಿಂದ ಪ್ರವಾಸಕ್ಕೆ ಯಾವುದೇ ಸೌಲಭ್ಯವನ್ನು ನೀಡಲಾಗುವುದಿಲ್ಲ.
- ಪ್ರವಾಸದ ಸಮಯದಲ್ಲಿ ಸಂಭವಿಸುವ ಯಾವುದೇ ಅವಘಡಗಳಿಗೆ ಶಾಲೆಯ ಮುಖ್ಯಸ್ಥರೇ ನೇರ ಹೂಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ.
- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು.
- ಯಾವುದೇ ಕಾರಣಕ್ಕೂ ಅನಧೀಕೃತವಾಗಿ ಖಾಸಗಿ ಹಾಗೂ ಮಿನಿ ಬಸ್ಗಳಲ್ಲಿ ಪ್ರವಾಸವನ್ನು ಕೈಗೊಳ್ಳಬಾರದು.
- ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವುದು ಹಾಗೂ ಕೋವಿಡ್ 19ಗೆ ಸಂಬಂಧಿಸಿದಂತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಬೇಕು.
- ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಪ್ರವಾಸಕ್ಕೆ ನಿಯೋಜಿತ ಮಹಿಳಾ ಶಿಕ್ಷಕರೇ ಕಡ್ಡಾಯವಾಗಿ ನೋಡಿಕೊಳ್ಳತಕ್ಕದ್ದು.