ಬೆಂಗಳೂರು/ಮೈಸೂರು: ೨೦೨೩ರ ವಿಧಾನಸಭಾ ಚುನಾವಣಾ (Election 2023) ಕಣ ರಂಗೇರುತ್ತಿದ್ದು, ಏಳೆಂಟು ತಿಂಗಳಷ್ಟೇ ಬಾಕಿ ಇದೆ. ಈ ಹಿನ್ನೆಲೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ. ಈಗಾಗಲೇ ೧೨೬ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರು ಆ ಪಟ್ಟಿಯಲ್ಲಿ ಇರಬಹುದು ಎಂಬ ಸುಳಿವು ನೀಡಿದ್ದಾರೆ.
ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ಬಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಕುರಿತು ಹೇಳಿದ್ದಾರೆ.
126 ಅಭ್ಯರ್ಥಿಗಳ ಪಟ್ಟಿ ಸಿದ್ಧ
ಈಗಾಗಲೇ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ೧೨೬ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ನಿಖಿಲ್ ತಮ್ಮ ಶಕ್ತಿಯನ್ನು ಬಳಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಲು ತೀರ್ಮಾನ ಮಾಡಿಕೊಂಡಿದ್ದಾರೆ. ಈಗ ಸಿದ್ಧವಾಗಿರುವ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರೂ ಇರಬಹುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಇದನ್ನೂ ಓದಿ | JDS ಪಕ್ಷದ ಕೆಲಸವನ್ನು ನಿರ್ಲಕ್ಷ್ಯ ಮಾಡುವ ಪದಾಧಿಕಾರಿಗಳಿಗೆ ಕುಮಾರಸ್ವಾಮಿ ಎಚ್ಚರಿಕೆ
ಲೋಕಸಭೆಗೆ ಸ್ಪರ್ಧೆ ಮಾಡಿದ್ದ ನಿಖಿಲ್
ಕಳೆದ ಲೋಕಸಭೆ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಈ ವೇಳೆ ಹಾಕಿರಲಿಲ್ಲ. ಇದೇ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ತೀವ್ರ ಪೈಪೋಟಿ ನಡೆಸಿದ್ದ ನಿಖಿಲ್ ಕೊನೆಗೂ ಸುಮಲತಾ ವಿರುದ್ಧ ಸುಮಾರು ೧.೨೫ ಲಕ್ಷ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಬಳಿಕ ಸ್ವಲ್ಪ ಸಮಯ ಚಿತ್ರರಂಗದತ್ತ ಮುಖ ಮಾಡಿದ್ದ ನಿಖಿಲ್ ಈಗ ಪುನಃ ಮಂಡ್ಯ ಜಿಲ್ಲೆ ಸೇರಿದಂತೆ ಇನ್ನಿತರ ಕಡೆ ಕಾಣಿಸಿಕೊಳ್ಳುತ್ತಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಸ್ಪರ್ಧೆ?
ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ ಎಂಬುದರಲ್ಲಿ ಎರಡು ಮಾತಿಲ್ಲ. ೨೦೧೯ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಎಂಟಕ್ಕೆ ಕ್ಷೇತ್ರದಲ್ಲಿ ಎಂಟರಲ್ಲೂ ಜೆಡಿಎಸ್ ಗೆಲುವು ಸಾಧಿಸಿತ್ತು. ಆದರೆ, ೨೦೨೧ರಲ್ಲಿ ಕೆ.ಆರ್. ಪೇಟೆ ಶಾಸಕ ಸ್ಥಾನಕ್ಕೆ ಡಾ. ಕೆ. ನಾರಾಯಣ ಗೌಡ ರಾಜೀನಾಮೆ ಕೊಟ್ಟಿದ್ದರಿಂದ ಆ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆದಿದ್ದು, ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ನಾರಾಯಣ ಗೌಡ ಜಯಗಳಿಸಿದ್ದರು. ಅದು ಬಿಟ್ಟರೆ ಇಡೀ ಮಂಡ್ಯ ಜಿಲ್ಲೆ ಜೆಡಿಎಸ್ ಮುಷ್ಠಿಯಲ್ಲಿಯೇ ಇದೆ. ಈಗಾಗಲೇ ನಿಖಿಲ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ಆರಂಭಿಸಿದ್ದರಿಂದ ಅವರು ಮಂಡ್ಯದಲ್ಲಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಅನುಮಾನವೂ ಹುಟ್ಟಿಕೊಂಡಿದೆ.
ಆದರೆ, ಇನ್ನೂ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಕುಮಾರಸ್ವಾಮಿ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಈಗ ನಿಖಿಲ್ ಸ್ಪರ್ಧೆ ಮಾಡಿದರೆ ಯಾವ ಜಿಲ್ಲೆಯಲ್ಲಿ, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಹುದು ಎಂಬ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ | Election 2023 | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶೇ.30 ಯುವಕರಿಗೆ ಜೆಡಿಎಸ್ ಟಿಕೆಟ್ ಬೇಕೆಂದಿದ್ದೇನೆ: ನಿಖಿಲ್ ಕುಮಾರಸ್ವಾಮಿ