ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದ ಬಳಿಕ ಬಿಜೆಪಿಯಲ್ಲಿ (Election 2023) ಮತ್ತಷ್ಟು ಶಕ್ತಿ ಬಂದಂತೆ ಆಗಿದೆ. ಕಾರ್ಯಕರ್ತರಾದಿಯಾಗಿ ಎಲ್ಲರೂ ಉತ್ಸಾಹದಲ್ಲಿದ್ದಾರೆ. ಮುಂದಿನ ಬಾರಿ ಮೋದಿಯನ್ನು ಶಿವಮೊಗ್ಗಕ್ಕೆ ಕರೆಸಿ ಬೃಹತ್ ಸಮಾವೇಶ ಏರ್ಪಡಿಸುವ ಚಿಂತನೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಮೋದಿ ಅವರನ್ನು ಶಿವಮೊಗ್ಗಕ್ಕೂ ಕರೆಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಅವರ ಸಮಯ ಕೇಳಲಾಗುವುದು, ನಿಗದಿಯಾದರೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತೇವೆ ಎಂದು ತಿಳಿಸಿದರು.
ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದ್ದು, ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.
ರಾಜ್ಯದ ಬಗ್ಗೆ ಮೋದಿಗೆ ವಿಶೇಷ ಆಸಕ್ತಿ- ಆರಗ ಜ್ಞಾನೇಂದ್ರ
ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಆಸಕ್ತಿ ಇದೆ. ಅವರು ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪ ಸರಿಯಲ್ಲ. ಒಬ್ಬ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕೋ ಅದನ್ನು ಮೋದಿ ಮಾಡುತ್ತಾರೆ. ಮಳೆ ಹಾನಿಗೆ ಸರ್ಕಾರ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.